ಅ.17ರಿಂದ ವಿಶ್ವವಿಖ್ಯಾತ ಮೈಸೂರು ದಸರಾ: ಮಾರ್ಗಸೂಚಿ ಬಿಡುಗಡೆ

Update: 2020-10-16 16:22 GMT

ಮೈಸೂರು,ಅ.14: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಆಚರಣೆ ಅಕ್ಟೋಬರ್ 17 ರಿಂದ ಅ.26 ರವರೆಗೆ ಸರಳವಾಗಿ ಆಚರಣೆ ಮಾರ್ಗಸೂಚಿ ಮತ್ತು ಆಹ್ವಾನ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 17 ರ ಶನಿವಾರ ಬೆ.07.45 ರಿಂದ 08.15 ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ನಾಡದೇವತೆ ಶ್ರೀಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2020ರ ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಘನ ಉಪಸ್ಥಿತಿಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ವೇಳೆ 200 ಮಂದಿಗಷ್ಟೇ ಅವಕಾಶ ಕಲ್ಪಿಸಲಾಗಿದ್ದು, ಅಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇವಲ 50 ಮಂದಿಗಷ್ಟೇ ಅವಕಾಶ ನೀಡಲು ಸೂಚಿಸಲಾಗಿದೆ.

ಅಕ್ಟೋಬರ್ 26ರ ಸೋಮವಾರ ಮಧ್ಯಾಹ್ನ 02.59 ರಿಂದ 03.20 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಆವರಣದಲ್ಲಿ ನಂದಿ ಧ್ವಜ ಪೂಜೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದು, ಅಂದು ಮಧ್ಯಾಹ್ನ 03.40 ರಿಂದ 04.15 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿ ಕುಳಿತುಕೊಳ್ಳುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ 300 ಜನರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಎಲ್ಲರಿಗೂ ಕೊರೋನ ಪರೀಕ್ಷೆ ಕಡ್ಡಾಯವಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಮತ್ತು ಸ್ಯಾನಿಟೈಸರ್ ಉಪಯೋಗಿಸುವಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News