ಎಸ್ಟಿ ಮೀಸಲಾತಿ ಶೇ.7.5ರಷ್ಟು ಹೆಚ್ಚಿಸದಿದ್ದರೆ ಹೋರಾಟ ಅನಿವಾರ್ಯ: ಪ್ರಸನ್ನಾನಂದಪುರಿ ಸ್ವಾಮೀಜಿ
ಬಾಗಲಕೋಟೆ, ಅ.15: ವಾಲ್ಮೀಕಿ(ಎಸ್ಟಿ) ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅ.31ರೊಳಗೆ ಸಿಹಿ ಸುದ್ದಿ ನೀಡಬೇಕು. ಇಲ್ಲದಿದ್ದರೆ ತೀವ್ರ ತರಹದ ಹೋರಾಟ ಅನಿವಾರ್ಯವಾಗಲಿದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ 24ಗಂಟೆಯೊಳಗೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತು ಕೊಟ್ಟಿದ್ದರು. ಕಳೆದ ಫೆಬ್ರವರಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲೂ ನ್ಯಾ.ನಾಗಮೋಹನದಾಸ್ ವರದಿ ಬಂದ ತಕ್ಷಣ ಮೀಸಲಾತಿ ಪ್ರಮಾಣ ಹೆಚ್ಚಿಸುವುದಾಗಿ ಹೇಳಿದ್ದರು. ಆದರೆ, ಈಗ ವಿಳಂಬ ನೀತಿ ಅನುಸರಿಸುತ್ತಿದ್ದಾರೆಂದು ಟೀಕಿಸಿದ್ದಾರೆ.
ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಕೊಡುವುದಾಗಿ ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಹೇಳಲಾಗಿತ್ತು. ಆದರೆ, ಬಿಜೆಪಿ ತನ್ನ ಮಾತಿನಂತೆ ನಡೆದುಕೊಳ್ಳದೆ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಮುಂದಿನ ದಿನಗಳಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿಯಲಾಗುವುದೆಂದು ಅವರು ಹೇಳಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅ.21ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಸತ್ಯಾಗ್ರಹ ಆರಂಭಿಸಲಿದ್ದೇವೆ. ಅ.31ರ ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ಮೀಸಲಾತಿ ಹೆಚ್ಚಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು.
-ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠ