×
Ad

ಬೆಳೆ ಹಾನಿ-ಆಸ್ತಿ ನಷ್ಟಕ್ಕೆ ವಿಶೇಷ ಅನುದಾನ ಘೋಷಿಸುವಂತೆ ಕುಮಾರಸ್ವಾಮಿ ಒತ್ತಾಯ

Update: 2020-10-15 19:29 IST

ಬೆಂಗಳೂರು, ಅ.15: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೊರೋನ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೆ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟು ಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News