ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಉಸ್ತುವಾರಿ ಸಚಿವರಿಗೆ ಸಿಎಂ ನಿರ್ದೇಶನ
ಬೆಂಗಳೂರು, ಅ. 15: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಅದರಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವುದಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ನೆರವು ನೀಡಲು ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.
ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜಿಲ್ಲೆಗಳ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲದೆ, ಸ್ಥಳದಲ್ಲೆ ಮೊಕ್ಕಾಂ ಹೂಡಿ ಪರಿಸ್ಥಿತಿ ನಿಭಾಯಿಸಬೇಕು. ಕಾಳಜಿ ಕೇಂದ್ರ ಸ್ಥಾಪನೆ ಸೇರಿದಂತೆ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಮಳೆ ಹಾನಿ ಪರಿಹಾರ ಕಾರ್ಯಕ್ಕೆ ಸರಕಾರದಲ್ಲಿ ಯಾವುದೇ ರೀತಿಯಲ್ಲಿಯೂ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ ಅಗತ್ಯದಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರವಾಸ ಪೀಡಿತ ಜಿಲ್ಲೆಗಳ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಾಳೆ(ಅ.16) ವಿಡಿಯೋ ಸಂವಾದ ನಡೆಸಲಿದ್ದು, ಪರಿಸ್ಥಿತಿಯ ಬಗ್ಗೆ ನಾನೇ ಮಾಹಿತಿ ಪಡೆಯಲಿದ್ದೇನೆ. ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ಹೇಳಿದರು.
ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಸರಕಾರ ಧಾವಿಸಿದೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದು, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಭಯ ನೀಡಿದ ಯಡಿಯೂರಪ್ಪ, ಜಿಲ್ಲಾಡಳಿತಗಳೊಂದಿಗೆ ನಿರಂತರ ಸಂಪರ್ಕದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.