ಉ.ಕ. ಭಾಗದಲ್ಲಿ ಮಹಾ ಮಳೆ-ಪ್ರವಾಹ: ಜನ ಜೀವನ ಸಂಪೂರ್ಣ ಅಸ್ತವ್ಯಸ್ತ, ಜಲ ದಿಗ್ಬಂದನದಲ್ಲಿ ನೂರಾರು ಗ್ರಾಮಗಳು

Update: 2020-10-15 16:19 GMT

ಬೆಂಗಳೂರು, ಅ. 15: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ಗ್ರಾಮಗಳು ಸಂಪರ್ಕ ಕಡಿದುಕೊಂಡಿದ್ದು ಅಕ್ಷರಶಃ ನಡುಗಡ್ಡೆಗಳಾಗಿ ಮಾರ್ಪಟ್ಟಿವೆ.

ಕೊಂಚ ಮಳೆ ತಗ್ಗಿದ್ದರೂ ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳ ವಿವಿಧ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಪರಿಣಾಮದಿಂದ ಸಾಮಾನ್ಯ ಜನ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡೆ ಮಹಾಮಾರಿ ಕೊರೋನ ಅಬ್ಬರಿಸುತ್ತಿದ್ದರೆ, ಮಹಾ ಮಳೆ-ಪ್ರವಾಹ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೂರಾರು ಗ್ರಾಮಗಳು ಜಲ ದಿಗ್ಬಂದನದಲ್ಲಿ ಸಿಲುಕಿವೆ.

ಸಾವಿರಾರು ಮನೆಗಳಿಗೆ ಹಾನಿ: ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಲಬುರಗಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕೈದು ಸಾವಿರಕ್ಕೂ ಅಧಿಕ ಮನೆಗಳು ಹಾನಿಗೀಡಾಗಿದ್ದು, ಜನ ಮತ್ತು ಜಾನುವಾರುಗಳು ನೀರುಪಾಲಾಗಿರುವ ಆಗಿರುವ ವರದಿಗಳು ಬಂದಿವೆ. ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

ಮಹಾರಾಷ್ಟ್ರ ಉಜನಿ, ವೀರ್ ಅಣೆಕಟ್ಟೆಗಳಿಂದ 7.5 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡುವ ಸಾಧ್ಯತೆ ಇರುವುದರಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ, ಚಿತ್ತಾಪುರ, ಅಫಜಲಪುರ ಹಾಗೂ ಸೇಡಂ ತಾಲೂಕುಗಳಲ್ಲಿನ 148ಕ್ಕೂ ಅಧಿಕ ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ಭೀಮಾ ನದಿತೀರದ ಹಾಗೂ ಹಿನ್ನೀರಿನ ಜನತೆ ಸುರಕ್ಷಿತವಾಗಿರುವ ಎತ್ತರದ ಪ್ರದೇಶಕ್ಕೆ ತೆರಳಲು ಜಿಲ್ಲಾಡಳಿತ ನಿರ್ದೇಶನ ನೀಡಿದೆ.

ಜಿಲ್ಲೆಯ ವಿವಿಧ ತಾಲೂಕುಗಳ ಹಲವು ಗ್ರಾಮಗಳು ಜಲಾವೃತವಾಗುವ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎರಡು ಎನ್‍ಡಿಆರ್‍ಎಫ್ ತಂಡಗಳು ಸ್ಥಳೀಯ ಪೊಲೀಸರೊಂದಿಗೆ ರಕ್ಷಣಾ ಕಾರ್ಯಾಚರಣೆ ಮಾಡುತ್ತಿವೆ. ಈಗಾಗಲೇ 150ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 50ಕ್ಕೂ ಹೆಚ್ಚ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುವುದು. ಜಿಲ್ಲೆಯ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಅಭಯ ನೀಡಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಒಟ್ಟು 2,576 ಮನೆಗಳು, 3 ಜಾನುವಾರು ಹಾಗೂ ಓರ್ವ ವ್ಯಕ್ತಿ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಸತತ ಮಳೆ ಸುರಿದ ಪರಿಣಾಮ ಮನೆಗಳು ಕುಸಿದು ಬಿದ್ದಿವೆ. ಬಾಗಲಕೋಟೆ ತಾಲೂಕಿನಲ್ಲಿ 241, ಬಾದಾಮಿ 370, ಗುಳೇದಗುಡ್ಡ 121, ಹುನಗುಂದ 120, ಇಲಕಲ್ಲ 113, ಜಮಖಂಡಿ 271, ರಬಕವಿ-ಬನಹಟ್ಟಿ 289, ಮುಧೋಳ 640, ಬೀಳಗಿ 140 ಸೇರಿ ಒಟ್ಟು 2576 ಮನೆಗಳು ಹಾನಿಗೊಳಗಾಗಿವೆ. 3 ಜಾನುವಾರು ಮತ್ತು ಓರ್ವ ವ್ಯಕ್ತಿಯ ಜೀವಹಾನಿಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಪ್ರಸಕ್ತ ಸಾಲಿನಲ್ಲಿ 37,410 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಲಾಗಿದ್ದ ಬೆಳೆ ಹಾನಿಯಾಗಿದೆ. 2020-21ನೆ ಸಾಲಿನಲ್ಲಿ ಜಿಲ್ಲೆಯಲ್ಲಿ 3,67,889 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಈ ಪೈಕಿ 37,410 ಹೆಕ್ಟೇರ್‍ನಲ್ಲಿ ಬೆಳೆಯಲಾಗಿದ್ದ ಹೆಸರು, ಉದ್ದು, ಸೋಯಾಬಿನ್ ಹಾಳಾಗಿದೆ. ಬಿತ್ತನೆಯ ಶೇ.10.17ರಷ್ಟು ಬೆಳೆ ನೀರು ಪಾಲಾಗಿದೆ ಎಂದು ತಿಳಿಸಲಾಗಿದೆ.

ಇನ್ನೂ ಮೂರು ದಿನ ಮಳೆ: ಈ ಮಧ್ಯೆ ರಾಜ್ಯದಲ್ಲಿ ಇನ್ನು ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳು ಹಾಗೂ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಧಾರವಾಡ, ಗದಗ, ಕಲಬುರಗಿ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸಂಪರ್ಕ ಕಡಿತ: ಕಲಬುರಗಿ, ಬೀದರ್ ಸಹಿತ ವಿವಿಧ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ವಿವಿಧೆಡೆ ಬಿಎಸ್‍ಎನ್‍ಎಲ್ ಸೇರಿದಂತೆ ವಿವಿಧ ಮೊಬೈಲ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಸರಕಾರಿ ಖಾಸಗಿ ಕಚೇರಿಗಳಲ್ಲಿ ಇಂಟರ್‍ನೆಟ್ ಸೇವೆ ಸ್ಥಗಿತಗೊಂಡಿದ್ದು, ಜನರು ಪರದಾಡುವಂತಾಗಿದೆ. ಅಲ್ಲದೆ, ಮಳೆ ಹಿನ್ನೆಲೆಯಲ್ಲಿ ಹಲವು ಗ್ರಾಮಗಳಲ್ಲಿ ವಿದ್ಯುತ್ ಕೈಕೊಟ್ಟಿದ್ದು, ಒಂದೆಡೆ ಮಳೆ, ಚಳಿಗಾಳಿಯಿಂದ ಬಸವಳಿದಿರುವ ಜನರು ಕಗ್ಗತ್ತಿಲಿನಲ್ಲಿ ದಿನದೂಡಬೇಕಾಗಿದೆ.

ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಅದರಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವುದಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ನೆರವು ನೀಡಲು ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜಿಲ್ಲೆಗಳ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲದೆ, ಸ್ಥಳದಲ್ಲೆ ಮೊಕ್ಕಾಂ ಹೂಡಿ ಪರಿಸ್ಥಿತಿ ನಿಭಾಯಿಸಬೇಕು. ಕಾಳಜಿ ಕೇಂದ್ರ ಸ್ಥಾಪನೆ ಸೇರಿದಂತೆ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಮಳೆ ಹಾನಿ ಪರಿಹಾರ ಕಾರ್ಯಕ್ಕೆ ಸರಕಾರದಲ್ಲಿ ಯಾವುದೇ ರೀತಿಯಲ್ಲಿಯೂ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ ಅಗತ್ಯದಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರವಾಸ ಪೀಡಿತ ಜಿಲ್ಲೆಗಳ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ವಾಸ್ತವ ಪರಿಸ್ಥಿತಿಯ ಬಗ್ಗೆ ನಾನೇ ಮಾಹಿತಿ ಪಡೆಯಲಿದ್ದೇನೆ. ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ಹೇಳಿದರು.

ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಸರಕಾರ ಧಾವಿಸಿದೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದು, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಾಳೆ(ಅ.16) ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದು, ಅಗತ್ಯ ಸಲಹೆ-ಸೂಚನೆ ನೀಡಲಾಗುವುದು'

-ಯಡಿಯೂರಪ್ಪ ಮುಖ್ಯಮಂತ್ರಿ

ತುರ್ತು ಪರಿಹಾರ ಕೈಗೊಳ್ಳಲು ಸೂಚನೆ

ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಜನತೆಯು ಸಂಕಷ್ಟದಲ್ಲಿರುವುದನ್ನು ಗಮನಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿಯನ್ನು ಪಡೆದು, ಮುಂಜಾಗ್ರತಾ ಕ್ರಮಕೈಗೊಂಡು, ಮನೆ ಹಾನಿಗೊಳಗಾದ ಸಂತ್ರತ್ತರಿಗಾಗಿ ಕಾಳಜಿ ಕೇಂದ್ರ ಸ್ಥಾಪಿಸಿ, ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ'

-ಗೋವಿಂದ ಎಂ.ಕಾರಜೋಳ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News