'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೋರಿ ಕೇಂದ್ರಕ್ಕೆ ಪತ್ರ: ಸಚಿವ ಆರ್.ಅಶೋಕ್

Update: 2020-10-16 13:14 GMT

ಬೆಂಗಳೂರು, ಅ. 16: `ರಾಜ್ಯದ ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿನ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಇದನ್ನು `ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗುವುದು' ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ನೆರೆಯ ಆಂಧ್ರ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರಕ್ಕೆ ಮನವಿ ಮಾಡಿದ್ದು, ಅದೇ ರೀತಿಯಲ್ಲಿ ರಾಜ್ಯದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗವನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿನ ಮಳೆ ಮತ್ತು ಪ್ರವಾಹ ಸಂಕಷ್ಟಕ್ಕೆ ಸಿಲುಕಿರುವ ಜನರ ಪರಿಹಾರ ಕಾರ್ಯಗಳಿಗೆ ಹಣಕಾಸಿನ ಕೊರತೆ ಇಲ್ಲ. ಕಲಬುರಗಿ ಜಿಲ್ಲೆಗೆ 20 ಕೋಟಿ ರೂ., ಯಾದಗಿರಿ ಜಿಲ್ಲೆಗೆ 15 ಕೊಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಎಲ್ಲ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂ.ತಕ್ಷಣವೇ ಜಮೆ ಮಾಡಲಾಗುವುದು. ಕೇಂದ್ರದ ನೆರವು ಕೋರಿಕೆ ಸಲ್ಲಿಸಲಾಗುವುದು ಎಂದು ಅಶೋಕ್ ಮಾಹಿತಿ ನೀಡಿದರು.

ರಾಜ್ಯದಲ್ಲಿ ಒಟ್ಟು 173 ತಾಲೂಕುಗಳು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದ ಅವರು, ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಕೂಡಲೇ ಕೇಂದ್ರ ಅಧ್ಯಯನ ತಂಡ ರವಾನಿಸಲು ಮನವಿ ಮಾಡಲಾಗುವುದು. ಅಲ್ಲದೆ, ಬೆಂಗಳೂರಿಗೆ ತೆರಳಿದ ಕೂಡಲೇ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ನೀಡುವ ಪರಿಹಾರ ಮೊತ್ತವನ್ನು ಐದು ಪಟ್ಟು ಹೆಚ್ಚಳಕ್ಕೆ ಕೇಂದ್ರದ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಎಂದರು.

ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಅಧಿಕಾರಿಗಳು ತಕ್ಷಣವೇ ನೆರವಾಗದಿದ್ದರೆ, ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸೋಮಾರಿಗಳನ್ನು ಮನೆಗೆ ಕಳಿಸುತ್ತೇನೆ ಎಂದು ಎಚ್ಚರಿಸಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ 3.31 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 23,996 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಳಾಗಿದೆ. 1268 ಸೇತುವೆಗಳು ಕುಸಿದಿವೆ. 10,978 ಮನೆಗಳು ಬಿದ್ದಿವೆ. 360 ಕೆರೆಗಳು ಒಡೆದಿವೆ. 3,168 ಸರಕಾರಿ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಪ್ರವಾಹ ಸಂತ್ರಸ್ತರಿಗೆ ಎಷ್ಟರಮಟ್ಟಿಗೆ ಸ್ಪಂದಿಸಿದೆ ಎಂಬುದು ಜನತೆಗೆ ಗೊತ್ತಿದೆ. ಈಗ ಅವರು ಪ್ರತಿಪಕ್ಷದಲ್ಲಿರುವ ಕಾರಣ ನಮ್ಮನ್ನು ಟೀಕಿಸುವುದು ಅನಿವಾರ್ಯ. ರಾಜ್ಯ ಸರಕಾರ ಪ್ರವಾಹ ಸಂತ್ರಸ್ತರಿಗೆ ಅತ್ಯಂತ ಸಮರ್ಪಕ ರೀತಿಯಲ್ಲಿ ಸ್ಪಂದಿಸುತ್ತಿದೆ. ಸರಕಾರದಲ್ಲಿ ಪರಿಹಾರ ಕಾರ್ಯಕ್ಕೆ ಯಾವುದೇ ರೀತಿಯಲ್ಲಿಯೂ ಹಣಕಾಸಿನ ಸಮಸ್ಯೆ ಇಲ್ಲ'

-ಆರ್.ಅಶೋಕ್, ಕಂದಾಯ ಸಚಿವ

ಕಾಟಾಚಾರಕ್ಕೆ ವೀಕ್ಷಣೆ

ಮಳೆ ಮತ್ತು ಪ್ರವಾಹ ಪರಿಸ್ಥಿತಿ ಖುದ್ದು ವೀಕ್ಷಣೆಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲೆಗೆ ಆಗಮಿಸಿದ್ದು ಕಾಟಾಚಾರಕ್ಕೆ ಎಂಬಂತಾಗಿದೆ. ಜೇವರ್ಗಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿಲ್ಲ. ಸಂಕಷ್ಟಕ್ಕೆ ಸಿಲುಕಿರುವ ಜನರ ನೋವನ್ನು ಆಲಿಸುವ  ಕನಿಷ್ಠ ಕೆಲಸವನ್ನು ಸಚಿವರು ಮಾಡಲಿಲ್ಲ. ಜನರ ಸಮಸ್ಯೆಯನ್ನು ಆಲಿಸಿ, ಅಗತ್ಯ ಪರಿಹಾರ ಘೋಷಣೆ ಮಾಡಿ ಕಷ್ಟದಲ್ಲಿರುವ ಜನರಿಗೆ ಧೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡಬೇಕು

-ಅಜಯ್ ಸಿಂಗ್ , ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News