ಜಾತಿವಾರು ಜನಗಣತಿ ವರದಿ ಬಿಡುಗಡೆ ಕೋರಿ ಅ.18ರಂದು ಸಭೆ: ಎಚ್.ಎಂ.ರೇವಣ್ಣ

Update: 2020-10-16 15:12 GMT

ಬೆಂಗಳೂರು, ಅ.16: ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಜಾತಿವಾರು ಜನಗಣತಿ ವರದಿಯನ್ನು ಜಾರಿಗೆ ತರುವಂತೆ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲು ಅ.18ರಂದು ಹಿಂದುಳಿದ ಜಾತಿಗಳ ಎಲ್ಲ ಮಠಾಧೀಶರು ಹಾಗೂ ಹಿಂದುಳಿದ ವರ್ಗಗಳ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ತಿಳಿಸಿದರು.

ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಜಾತಿವಾರು ಜನಗಣತಿ ಸಮೀಕ್ಷೆಯನ್ನು ಬಿಡುಗಡೆ ಮಾಡಬೇಕು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಈವರೆಗೆ ಕರ್ನಾಟಕ ಹೊರತುಪಡಿಸಿ ಬೇರೆ ಯಾವ ರಾಜ್ಯದಲ್ಲೂ ಜಾತಿವಾರು ಜನಗಣತಿ ನಡೆದಿಲ್ಲ ಎಂದರು.

10 ವರ್ಷಕ್ಕೊಮ್ಮೆ ಜನಗಣತಿ ಕಾರ್ಯ ನಡೆಯುತ್ತಿದೆ. ಜಾತಿವಾರು ಜನಗಣತಿ ಕಾರ್ಯವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ನಡೆಸಿದೆ. ಇದರಲ್ಲಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಮಾಹಿತಿ ಕಲೆ ಹಾಕಲಾಗಿದೆ. 162 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿತ್ತು. 2 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಈ ಸರ್ವೆ ನಡೆದಿದೆ ಎಂದು ರೇವಣ್ಣ ಹೇಳಿದರು.

ಸಿದ್ದರಾಮಯ್ಯ ಸರಕಾರದ ಅವಧಿಯ ಕೊನೆಯಲ್ಲಿ ವರದಿಯ ಸಿದ್ಧತೆ ಇನ್ನೂ ಅಂತಿಮ ಹಂತದಲ್ಲಿತ್ತು. ತಯಾರಾದ ವರದಿ ಸರಕಾರಕ್ಕೆ ಸಲ್ಲಿಕೆಯಾಗಲಿಲ್ಲ. ಆದರೆ, ಇದೀಗ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ಸರಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದೆ. ಸರಕಾರ ಈ ವರದಿಯನ್ನು ಒಪ್ಪಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಈ ವರದಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಇದೇ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಸಮುದಾಯದ ಮಠಾಧೀಶರು, ಎಲ್ಲ ಹಿಂದುಳಿದ ಜಾತಿಗಳು, ವರ್ಗಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟಗಳ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ರೇವಣ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಕಾರ್ಯಾಧ್ಯಕ್ಷ ಸುರೇಶ್ ಲಾತೂರ್, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ವೆಂಕಟರಾಮಯ್ಯ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News