ಉಪ ಚುನಾವಣೆ: ಶಿರಾದಲ್ಲಿ 17, ಆರ್.ಆರ್.ನಗರದಲ್ಲಿ 23 ಮಂದಿ ಅಖಾಡದಲ್ಲಿ

Update: 2020-10-16 18:31 GMT

ಬೆಂಗಳೂರು, ಅ. 16: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪ್ರತಿಷ್ಟೆ ಮತ್ತು ಪೈಪೋಟಿ ಸೃಷ್ಟಿಸಿರುವ ಇಲ್ಲಿನ ರಾಜರಾಜೇಶ್ವರಿ ನಗರ(ಆರ್.ಆರ್.ನಗರ) ಮತ್ತು ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಪರಿಶೀಲನೆ ಕಾರ್ಯ ನಾಳೆ(ಅ.17) ನಡೆಯಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ(ಅ.16)ವು ಹಲವು ಮಂದಿ ನಾಮಪತ್ರ ಸಲ್ಲಿಸಿದ್ದು, ಶಿರಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಬಿಜೆಪಿಯ ಡಾ.ರಾಜೇಶ್ ಗೌಡ ಹಾಗೂ ಜೆಡಿಎಸ್‍ನ ಅಮ್ಮಾಜಮ್ಮ ಸೇರಿದಂತೆ ಒಟ್ಟು 17 ಮಂದಿ ಸ್ಪರ್ಧಿಸಿದ್ದಾರೆ.

ಇತ್ತ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪ್ರತಿಪಕ್ಷ ಕಾಂಗ್ರೆಸ್‍ನ ಎಚ್.ಕುಸುಮಾ, ಆಡಳಿತಾರೂಢ ಬಿಜೆಪಿಯ ಮುನಿರತ್ನ, ಜೆಡಿಎಸ್‍ನ ವಿ.ಕೃಷ್ಣಮೂರ್ತಿ ಸೇರಿದಂತೆ ಒಟ್ಟು 23 ಮಂದಿ ಅಭ್ಯರ್ಥಿಗಳು ಅಖಾಡಕ್ಕಿಳಿದಿದ್ದಾರೆ.

ಪಕ್ಷೇತರರೇ ಹೆಚ್ಚು: ಶಿರಾ ವಿಧಾನಸಭಾ ಕ್ಷೇತ್ರದ ಕಣದಲ್ಲಿ ಒಟ್ಟು 10 ಮಂದಿ ಪಕ್ಷೇತರ ಅಭ್ಯರ್ಥಿಗಳಿದ್ದರೆ, ಇತ್ತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿಯೂ 13 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆ ಪೈಕಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಹೆಸರನ್ನು ಹೋಲುವ ರೀತಿಯಲ್ಲೇ ಮುನಿರತ್ನಮ್ಮ ಮತ್ತು ಮುನಿರತ್ನ ಎಂಬ ಇಬ್ಬರು ಅಭ್ಯರ್ಥಿಗಳಿರುವುದು ಗಮನಾರ್ಹವಾಗಿದೆ.

ನಾಳೆ(ಅ.17) ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.19ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಆ ಬಳಿಕ ಕಣದಲ್ಲಿರುವ ಅಭ್ಯರ್ಥಿಗಳು ಅಧಿಕೃತವಾಗಿ ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ. ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರಕ್ಕೆ ನಿರ್ಬಂಧವಿದೆ. ಆದರೂ, ಅದನ್ನು ಲೆಕ್ಕಿಸದೆ ಅಭ್ಯರ್ಥಿಗಳು ಮತದಾರರ ಮನ ಗೆಲ್ಲಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದು, ಮತದಾರರನ್ನು ಎಡತಾಕುತ್ತಿದ್ದಾರೆ.

ಎರಡು ಕ್ಷೇತ್ರಗಳಲ್ಲಿಯೂ ಗೆಲ್ಲಲೇಬೇಕೆಂಬ ಜಿದ್ದಾಜಿದ್ದಿಗೆ ಬಿದ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರು ಹಗಲು-ರಾತ್ರಿಗಳ ಪರಿವೆ ಮರೆತು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ಮಧ್ಯೆ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದು, ರಂಗೇರುತ್ತಿರುವ ಉಪಚುನಾವಣೆ ತೀವ್ರ ಕುತೂಹಲ ಸೃಷ್ಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News