ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ

Update: 2020-10-17 14:13 GMT

ಉಡುಪಿ, ಅ.17: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ನ್ಯಾಯಾಂಗ ಇಲಾಖೆ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ನ್ಯಾಯಾಧೀಶ ಜೆ.ಎನ್.ಸುಬ್ರಮಣ್ಯ ಮಾತನಾಡಿ, ಈ ಜನಾಂದೋಲನ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿ ಮನೆಗೂ ಭೇಟಿ ನೀಡಿ, ಕೋವಿಡ್ ಕುರಿತು ಅರಿವು ಮೂಡಿಸುವುದರ ಜೊತೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮನೆಯವರಿಂದ ಪ್ರತಿಜ್ಞೆ ಮಾಡಿಸ ಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ನಿಂದ ಈವರೆಗೆ 172 ಮಂದಿ ಮೃತಪಟ್ಟಿದ್ದು, ಅದರಲ್ಲಿ ಶೇ.75 ಕ್ಕಿಂತ ಹೆಚ್ಚು ಮಂದಿ 60 ವರ್ಷ ಮೇಲ್ಪಟ್ಟ ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿರುವವರು ಆಗಿದ್ದಾರೆ. ಆದುದರಿಂದ ಕೋವಿಡ್‌ನಿಂದ ಹಿರಿಯ ನಾಗರಿಕ ರಿಗೆ ಹೆಚ್ಚಿನ ಅಪಾಯವಿದ್ದು, ಅವರ ಆರೋಗ್ಯದ ಜವಾಬ್ದಾರಿ ಪ್ರತಿಯೊಬ್ಬ ಕುಟುಂಬ ಸದಸ್ಯರ ಮೇಲಿದೆ. ಇದಕ್ಕಾಗಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಜನಾಂದೋಲನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಸಿಇಓ ಡಾ.ನವೀನ್ ಭಟ್ ಮಾತನಾಡಿ, ಕೊರೋನ ಹರಡದಂತೆ ತಡೆಯುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದ್ದು, ಸರಿ ಯಾದ ಕ್ರಮದಲ್ಲಿ ಮಾಸ್ಕ್ ಅಳವಡಿಕೆ, ಸುರಕ್ಷಿತಾ ಅಂತರ ಪಾಲನೆಯನ್ನು ಕಡ್ಡಾಯ ವಾಗಿ ಅನುಸರಿಸಬೇಕು. ಕೋವಿಡ್ ಕೊನೆಗಾಣಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಆರೋಗ್ಯ ಇಲಾಖೆ ವತಿಯಿಂದ ಹೊರತಂದ ಕೋವಿಡ್ -19 ಮಾಹಿತಿ ಕುರಿತ ಸ್ಟಿಕರ್‌ನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ನ್ಯಾಯಾ ಧೀಶರಾದ ವಿವೇಕಾನಂದ ಎಸ್.ಪಂಡಿತ್, ಲಾವಣ್ಯ, ಭವಾನಿ, ಶೋಭಾ, ಮಂಜುನಾಥ್, ಮಹಾಂತೇಶ್ ಬೂಸಗೋಳ, ನಿರ್ಮಲಾ, ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಯಾದವ ವನಮಾಲಾ, ಡಿಎಚ್‌ಓ ಡಾ. ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ.ಪ್ರೇಮಾನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್‌ಸಾಗರ್, ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಜಿಲ್ಲಾ ಅಭಿಯೋಜಕಿ ಶಾಂತಾ ಬಾಯಿ ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಸ್ವಾಗತಿಸಿದರು. ನ್ಯಾಯಾಧೀಶ ಇರ್ಫಾನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News