`ಸಾಮಾಜಿಕ-ಆರ್ಥಿಕ ಸಮೀಕ್ಷೆ' ವರದಿ ಜಾರಿಗೆ ತರುವ ಜವಾಬ್ದಾರಿ ಈಶ್ವರಪ್ಪ ಹೆಗಲಿಗೆ: ಸಿದ್ದರಾಮಯ್ಯ

Update: 2020-10-18 14:31 GMT

ಬೆಂಗಳೂರು, ಅ. 18: `ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ರಾಜ್ಯ ಸರಕಾರ ಒಪ್ಪಿಕೊಂಡು ಜಾರಿಗೆ ತರುವ ಜವಾಬ್ದಾರಿಯನ್ನು ಸಚಿವ ಕೆ.ಎಸ್.ಈಶ್ವರಪ್ಪ ವಹಿಸಿಕೊಂಡಿದ್ದಾರೆ. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟಿದ್ದೇವೆ, ಇದಕ್ಕಾಗಿ ಹೋರಾಟ ಮಾಡುವ ಅಗತ್ಯ ಬರಲಾರದೆಂದು ನಂಬಿದ್ದೇವೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಯನ್ನು ನಾವು ಭೇಟಿ ಮಾಡಿ ಒತ್ತಾಯಿಸಲಿದ್ದೇವೆ. ಇದರ ಜೊತೆಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಪುನರ್ ರಚಿಸಿ ಅಧ್ಯಕ್ಷರನ್ನು ನೇಮಕ ಮಾಡಲು ಆಗ್ರಹಿಸುತ್ತೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಸಮೀಕ್ಷೆ ಹಿಂದುಳಿದ ಜಾತಿಗಳಿಗೆ ಸೀಮಿತವಾದುದಲ್ಲ. ಅದು ಸಮಾಜದಲ್ಲಿರುವ ಎಲ್ಲ ಜಾತಿಗಳ ಸಮೀಕ್ಷೆ. ಅದನ್ನು ಒಪ್ಪಿಕೊಂಡು ವೈಜ್ಞಾನಿಕ ರೀತಿಯಲ್ಲಿ ಜಾರಿಗೆ ತಂದರೆ ಎಲ್ಲ ಜಾತಿ-ಧರ್ಮಗಳಿಗೂ ಒಳಿತಾಗುತ್ತದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದ್ದೇ ನಮ್ಮ ಸರಕಾರ. ನಮ್ಮ ಆಡಳಿತಾವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೆ ನಾವೇ ಅನುಷ್ಠಾನಕ್ಕೆ ತರುತ್ತಿದ್ದೆವು. ಪೂರ್ಣಗೊಂಡಿಲ್ಲದ ಕಾರಣ ನಮಗೆ ಅದನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕುರುಬರು ಮಾತ್ರವಲ್ಲ, ಪರಿಶಿಷ್ಟ ಪಂಗಡದ ಗುಣಲಕ್ಷಣಗಳನ್ನು ಹೊಂದಿರುವ ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬುದು ನನ್ನ ಅಭಿಪ್ರಾಯ. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರಕಾರ ಗಂಗಾಮತಸ್ಥರು, ಗೊಲ್ಲರು ಮತ್ತು ಗೊಂಡ-ರಾಜಾಗೊಂಡ ಸಮುದಾಯಗಳನ್ನು ಪರಿಶಿಷ್ಟ ಪಂಡಗಕ್ಕೆ(ಎಸ್ಟಿ) ಸೇರಿಸಬೇಕೆಂದು ಶಿಫಾರಸು ಮಾಡಿದ್ದೆ ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಗೊಲ್ಲರು, ಗಂಗಾಮತಸ್ಥರು, ಗೊಂಡರಂತೆ ಕುರುಬರು ತಮ್ಮನ್ನು ಎಸ್ಟಿಗೆ ಸೇರಿಸಬೇಕೆಂದು ಕೇಳುತ್ತಾ ಬಂದಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಕುರುಬರು ಎಸ್.ಟಿ.ಗೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್.ಟಿ.ಗೆ ಸೇರಿಸಬೇಕೆಂದು ಕುರುಬರು ಬೇಡಿಕೆ ಇಟ್ಟಿದ್ದಾರೆ. ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಗೆ ವಿರೋಧ ಇಲ್ಲ. ನಮ್ಮ ಸರಕಾರ ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಜಾರಿಗೊಳಿಸಿದಾಗ ಪರಿಶಿಷ್ಟ ಜಾತಿಯವರಿಗೆ ಶೇ.17.1ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.6.95ರಷ್ಟು ಮೀಸಲಾತಿ ಕಲ್ಪಿಸಿದ್ದೆವು. ಆದುದರಿಂದ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವುದು ನ್ಯಾಯಸಮ್ಮತವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಮಾಜದ ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದಾಗಲೇ ಸಾಮಾಜಿಕ ನ್ಯಾಯ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಇದೇ ನಮ್ಮೆಲ್ಲರ ಒಮ್ಮತದ ಬೇಡಿಕೆಯಾಗಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News