ನ.1ರಿಂದ ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಜಾರಿ: ಕೆಡಿಪಿ ಸಭೆಯಲ್ಲಿ ಉಡುಪಿ ಜಿಪಂ ಅಧ್ಯಕ್ಷ

Update: 2020-10-19 13:19 GMT

ಉಡುಪಿ, ಅ.19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ನವೆಂಬರ್ 1ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಪಂನ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪ್ಲಾಸ್ಟಿಕ್ ನಿಷೇಧ ಕಾಯಿದೆ 2016ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಕುರಿತ ಆದೇಶ ಪಾಲನೆಯಾಗುತ್ತಿಲ್ಲ. ಅಂಗಡಿಗಳಲ್ಲಿ, ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ನೀಡುತ್ತಿರುವುದು ಕಂಡು ಬರುತ್ತಿದೆ. ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಸಹ ಅವುಗಳ ಬಳಕೆ ನಡೆಯುತ್ತಿಲ್ಲ. ಅದ್ದರಿಂದ ನವೆಂಬರ್ 1ರಿಂದ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್‌ಗಳಲ್ಲಿ ಕಡ್ಡಾಯವಾಗಿ ದಂಡ ವಿಧಿಸಬೇಕು. ಈ ಬಗ್ಗೆ ಗ್ರಾಮಗಳಲ್ಲಿ ಇಂದಿನಿಂದಲೇ ಜಾಗೃತಿ ಮೂಡಿಸುವ ಕೆಲಸ ನಡೆಯ ಬೇಕು ದಿನಕರ ಬಾಬು ಹೇಳಿದರು.

ತಾರಸಿ ತೋಟ ನಿರ್ವಹಣೆ ಕುರಿತಂತೆ ಜಿಲ್ಲಾ ತೋಟಗಾರಿಕೆ ಇಲಾಖೆ ಕಟ್ಟಡದ ಮೇಲಿರುವ ಪ್ರಾತ್ಯಕ್ಷಿಕೆಯ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುವುದರ ಮೂಲಕ ಸಾರ್ವಜನಿಕರಿಗೆ ತಾರಸಿ ತೋಟ ನಿರ್ಮಾಣಕ್ಕೆ ಪ್ರೋತ್ಸಾಹಿಸುವಂತೆ ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ದಿನಕರ ಬಾಬು ಸೂಚಿಸಿದರು.

ಅಧಿಕ ಮಳೆ:  ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.15ರಷ್ಟು ಅಧಿಕ ಮಳೆಯಾಗಿದೆ. 4375 ಮಿ.ಮೀ. ಜಿಲ್ಲೆಯ ವಾಡಿಕೆ ಮಳೆಯಾಗಿದ್ದು, ಈ ಬಾರಿ 5051ಮೀ.ಮೀ. ಮಳೆ ಸುರಿದಿದೆ. ಭಾರೀ ಮಳೆಯಿಂದ 273 ಹೆಕ್ಟೇರ್ ಕೃಷಿಗೆ ಹಾನಿಯಾಗಿದ್ದು, ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.

ಮಳೆಯಿಂದಾಗಿ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಮಟ್ಟು ಸುತ್ತುಮುತ್ತಲಿನ 6.8 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಒಂದು ಎಕರೆಗೆ 20,000ರೂ.ನಂತೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು.

ಜಿಲ್ಲೆಯ ಪ್ರಮುಖ ಇಲಾಖೆಗಳಲ್ಲಿ ಅಧಿಕಾರಿಗಳ ಕೊರತೆಯಿದ್ದು, ಕೂಡಲೇ ಅಧಿಕಾರಿಗಳನ್ನು ನೇಮಿಸುವಂತೆ ಸರಕಾರಕ್ಕೆ ಪತ್ರ ಬರೆಯುವ ನಿರ್ಣಯ ಕೈಗೊಳ್ಳುವಂತೆ ತೀರ್ಮಾನಿಸಲಾಯಿತು. ಹಿರಿಯ ನಾಗರೀಕರ ಸಹಾಯವಾಣಿ ಸಿಬ್ಬಂದಿಗೆ ಒಂದು ವರ್ಷದಿಂದ ವೇತನ ನೀಡದ ಕುರಿತು ಉಪಾಧ್ಯಕ್ಷೆ ಶೀಲಾ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್‌ಗಳಿಗೆ ನೇಮಕ ಮಾಡಿರುವ ಆಡಳಿತಾಧಿಕಾರಿಗಳು ನಿಯಮಿತವಾಗಿ ಗ್ರಾಮ ಪಂಚಾಯತ್ ಕಚೇರಿಗಳಿಗೆ ಹಾಜರಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ ಅಧ್ಯಕ್ಷರು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಪಂ ಸಿಇಓ ಡಾ.ನವೀನ್ ಭಟ್, ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಯೋಜನಾ ನಿರ್ದೇಶಕ ಗುರುದತ್,ಯೋಜನೆ, ಅಂದಾಜು ಮತ್ತು ವೌಲ್ಯ ಮಾಪನಾಧಿಕಾರಿ ರಾಧಾಕೃಷ್ಣ ಅಡಿಗ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News