ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

Update: 2020-10-19 15:16 GMT

ಬೆಂಗಳೂರು, ಅ.19: ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ಆರೋಪಿಗಳಾದ ಡಿವೈಎಸ್ಪಿ, ಇನ್‍ಸ್ಪೆಕ್ಟರ್ ಹಾಗೂ ಪಿಎಸ್ಸೈ ಅನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.

ಐಎಂಎ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಪ್ರಕರಣದ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸಿಐಡಿ ಡಿವೈಎಸ್ಪಿ ಇ.ಬಿ. ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‍ಸ್ಪೆಕ್ಟರ್ ಆಗಿದ್ದ ಎಂ. ರಮೇಶ್ ಹಾಗೂ ಪಿಎಸ್ಸೈ ಗೌರಿ ಶಂಕರ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಐಎಂಎ ಪ್ರಕರಣದಲ್ಲಿ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ಬಗ್ಗೆ ಸರಕಾರಕ್ಕೆ ಪತ್ರ ಬರೆದಿದೆ. ಅದನ್ನು ಪರಿಶೀಲಿಸಿ, ಈ ಮೂವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಐಪಿಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹಿಂದೇಟು ?

ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ಅವರು ಸಹ ಪ್ರಮುಖ ಆರೋಪಿಗಳಾಗಿದ್ದು, ಅವರ ವಿರುದ್ಧ ರಾಜ್ಯ ಸರಕಾರ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಅಲ್ಲದೆ, ಐಪಿಎಸ್ ಹಾಗೂ ನಾನ್ ಐಪಿಎಸ್ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ ಸರಕಾರಕ್ಕೆ ಸಿಬಿಐ ಪತ್ರ ಬರೆದಿದೆ. ಆದರೆ, ಅದನ್ನು ಪೂರ್ತಿಯಾಗಿ ಜಾರಿಗೆ ತಂದಿಲ್ಲ. ಐಪಿಎಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೇ, ಕೇಂದ್ರ ಸರಕಾರಕ್ಕೂ ಯಾವುದೇ ಶಿಫಾರಸ್ಸು ಮಾಡದೇ ಸೇವೆಯಲ್ಲಿ ಮುಂದುವರಿಸಿರುವುದಕ್ಕೆ ಸಿಬಿಐ ಅಧಿಕಾರಿಗಳು ಸಹ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News