ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Update: 2020-10-20 14:24 GMT

ಬೆಂಗಳೂರು, ಅ.20: ರಾಜ್ಯದಲ್ಲಿ ಇನ್ನೂ ಮೂರು ದಿನ(ಅ.21, 22, 23ರಂದು) ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ಬಹುತೇಕ ಮಳೆಯಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 7 ಸೆಂ.ಮೀ, ಚಿಂತಾಮಣಿ 4 ಸೆಂ.ಮೀ, ಶಿರಹಟ್ಟಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಬಂಗಾಳ ಉಪಸಾಗರದ ಮಧ್ಯಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 23ರವರೆಗೆ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.24 ರಂದು ಕೆಲವು ಕಡೆ ಮಾತ್ರ ಮಳೆಯಾಗಲಿದೆ ಎಂದರು.

ಉತ್ತರ ಒಳನಾಡಿನಲ್ಲಿ ಅ.20ರಿಂದ 22ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದ್ದು, ಅ. 23, 24ರಂದು ಕೆಲವು ಕಡೆ ಮಾತ್ರ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ. 20 ಹಾಗೂ 21ರಂದು ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗಲಿದ್ದು, ಅಕ್ಟೋಬರ್ 22ರಿಂದ 24ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ.

ಶಿವಮೊಗ್ಗ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ರಾಯಚೂರು, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮಂಗಳವಾರ ಮತ್ತು ಬುಧವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಬುಧವಾರದವರೆಗೆ ಮಳೆಯಾಗಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News