ಪಂಚಮಸಾಲಿ ಜನಾಂಗ 2ಎಗೆ ಸೇರ್ಪಡೆಗೆ ಒತ್ತಾಯಿಸಿ ಅ.28ಕ್ಕೆ ಉಪವಾಸ ಸತ್ಯಾಗ್ರಹ

Update: 2020-10-20 17:13 GMT

ಹುಬ್ಬಳ್ಳಿ, ಅ.20: ಲಿಂಗಾಯತ ಪಂಚಮಸಾಲಿ ಸಮುದಾಯ ಜನಸಂಖ್ಯೆಯಲ್ಲಿ ಬಹುಸಂಖ್ಯಾತರಾಗಿದ್ದರೂ ಸೌಲಭ್ಯಗಳ ವಿಷಯದಲ್ಲಿ ಅಲ್ಪಸಂಖ್ಯಾತರಾಗಿದ್ದೇವೆ. ಈ ಸಮಸ್ಯೆಗೆ ಪರಿಹಾರವಾಗಿ ಈ ಸಮಾಜದವರನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಬೇಕು ಹಾಗೂ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ಅ.28ರಂದು ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯಶ್ರೀ ಹೇಳಿದ್ದಾರೆ.

ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.28ರ ಬೆಳಗ್ಗೆ 9ಗಂಟೆಯಿಂದ ಸಂಜೆ 4ಗಂಟೆಯವರೆಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈ ಸತ್ಯಾಗ್ರಹಕ್ಕೆ 25 ಸಾವಿರ ಜನರು ಬರಲಿದ್ದು, ಸುರಕ್ಷಿತ ಅಂತರ ಕಾಯ್ದುಗೊಂಡು ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.

ಈ ಹೋರಾಟಕ್ಕೆ ಸಮಾಜದ ಎಲ್ಲ ಜನಪ್ರತಿನಿಧಿಗಳೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪಂಚಮಸಾಲಿ ಸಮುದಾಯವಿದೆ. ಜನಸಂಖ್ಯೆ ಹೆಚ್ಚಿದ್ದರೂ ಸೌಲಭ್ಯಗಳು ಕಡಿಮೆ ಇವೆ ಎಂದು ತಿಳಿಸಿದರು.

ಲಿಂಗಾಯತ ಸಮುದಾಯದ ಒಳ ಪಂಗಡದವರಿಗೂ ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು. ಬೆಳಗಾವಿಯ ವಿಧಾನಸೌಧದ ಮುಂಭಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳನ್ನು ಸ್ಥಾಪಿಸಬೇಕು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎನ್ನುವ ಬೇಡಿಕೆಗಳಿಗೂ ಉಪವಾಸ ಸತ್ಯಾಗ್ರಹದ ವೇಳೆ ಹಕ್ಕೊತ್ತಾಯ ಮಾಡಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News