ಅ.22: ಸಚಿವ ಸಂಪುಟ ಸಭೆ : ಪ್ರವಾಹ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ?

Update: 2020-10-21 15:56 GMT

ಬೆಂಗಳೂರು, ಅ. 21: ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಖುದ್ದು ವೈಮಾನಿಕ ಸಮೀಕ್ಷೆ ನಡೆಸಿ, ನಷ್ಟದ ಕುರಿತು ಅಧಿಕಾರಿಗಳೊಂದಿಗೆ ಚಿರ್ಚಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅ.22 ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂತ್ರಸ್ತರ ನೆರವಿಗೆ ವಿಶೇಷ ಪ್ಯಾಕೇಜ್ ಪ್ರಕಟಿಸುವ ಸಾಧ್ಯತೆಗಳಿವೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಅ.22 ಬೆಳಗ್ಗೆ 11ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದ್ದು, ರಾಜ್ಯದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯಿಂದ ನೂರಾರು ಗ್ರಾಮಗಳು ಜಲಾವೃತವಾಗಿದ್ದು, ಅಪಾರ ನಷ್ಟ ಉಂಟಾಗಿದೆ. ವಿಶೇಷ ಪ್ಯಾಕೇಜ್‍ಗೆ ಒತ್ತಾಯವೂ ಕೇಳಿಬಂದಿದ್ದು, ಈ ಬಗ್ಗೆ ಸಂಪುಟ ಸಭೆಯಲ್ಲಿ ಸಿಎಂ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆ ಮೇಲ್ದರ್ಜೆಗೆ: 150 ಕೋಟಿ ರೂ.ವೆಚ್ಚದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಅ.22 ನಡೆಯಲಿರುವ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ. ಅಲ್ಲದೆ, ರಾಜ್ಯದ ಇನ್ನಿತರ ಮಹತ್ವದ ವಿಚಾರಗಳಿಗೆ ಸಂಬಂಧಿಸಿದಂತೆ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ನೀಡುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News