ಉ.ಪ್ರ. ರೈತರು ಬೆಳೆಯನ್ನು ಈಗಲೂ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

Update: 2020-10-21 16:26 GMT

ಮುಂಬೈ, ಅ. 21: ಉತ್ತರಪ್ರದೇಶದಾದ್ಯಂತ ರೈತರು ತಮ್ಮ ಭತ್ತವನ್ನು ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್‌ಪಿ) ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ. ಕೇಂದ್ರದ ಬಿಜೆಪಿ ಸರಕಾರ ರೈತರ ಸಮಸ್ಯೆ ಆಲಿಸುತ್ತಿಲ್ಲ ಎಂದು ಆರೋಪಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಮುಹಮ್ಮದ್ ಖಿರಿ ಮಂಡಿಯಲ್ಲಿ ಬೆಳೆ ಸಂಗ್ರಹದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ರೈತರು ಆರೋಪಿಸುತ್ತಿರುವ ವೀಡಿಯೊವನ್ನು ಅವರು ಪೋಸ್ಟ್ ಮಾಡಿದ್ದಾರೆ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಬಿಜೆಪಿ ಸರಕಾರ ಕೃಷಿ ಕಾಯ್ದೆ ಕುರಿತು ಸರಕಾರಿ ಖಾಟ್ ಸಮ್ಮೇಳನ ನಡೆಸುತ್ತಿದೆ. ಆದರೆ, ರೈತರ ನೋವನ್ನು ಆಲಿಸುತ್ತಿಲ್ಲ. ಉತ್ತರಪ್ರದೇಶದ ಹೆಚ್ಚಿನ ಪ್ರದೇಶಗಳಲ್ಲಿ ರೈತರು ತಮ್ಮ ಬೆಳೆಯನ್ನು ಕ್ವಿಂಟಾಲ್‌ಗೆ ಕನಿಷ್ಠ ಬೆಂಬಲ ಬೆಲೆ 1,868ಕ್ಕೆ ಕಡಿಮೆ 1 ಸಾವಿರ ರೂಪಾಯಿಯಿಂದ 1,100 ರೂಪಾಯಿ ವರೆಗೆ ಮಾರಾಟ ಮಾಡುವ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಪಕ್ಷಗಳು ಹಾಗೂ ರೈತರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ನಡುವೆ ಅವರು ಈ ಟ್ವೀಟ್ ಮಾಡಿದ್ದಾರೆ. ನೂತನ ಕೃಷಿ ಕಾಯ್ದೆ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡುತ್ತಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ನಡುವೆ ಬಿಜೆಪಿ, ಕನಿಷ್ಠ ಬೆಂಬಲ ಬೆಲೆಯನ್ನು ಮುಂದುವರಿಸಲು ಸರಕಾರ ಬದ್ಧವಾಗಿದೆ ಎಂದು ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News