ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ : ಸಿದ್ದರಾಮಯ್ಯ

Update: 2020-10-22 06:26 GMT

ಬೆಂಗಳೂರು, ಅ.22: ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಉಪ ಚುನಾವಣೆ ಬಳಿಕ 'ಹೌದು ಹುಲಿಯಾ' ಕಾಡಿಗೆ ಹೋಗಬೇಕಾಗುತ್ತದೆ ಎಂಬ ನಳಿನ್ ಕುಮಾರ್ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” Immature fellow ಎಂದು ಆಕ್ರೋಶ ಹೊರಹಾಕಿದ್ದಾರೆ.

ನಳಿನ್ ಕುಮಾರ್ ಕಟೀಲು ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್. ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ, ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News