ಅಂಚೆ ಇಲಾಖೆ ಮೂಲಕ 'ಭಾಗ್ಯಲಕ್ಷ್ಮಿ’ ಅನುಷ್ಠಾನ: ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

Update: 2020-10-22 14:07 GMT

ಬೆಂಗಳೂರು, ಅ. 22: ಉಡುಪಿ ಜಿಲ್ಲಾಸ್ಪತ್ರೆಯನ್ನು 115 ಕೋಟಿ ರೂಪಾಯಿ ವೆಚ್ಚದಲ್ಲಿ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ, ನೂತನ ಆಸ್ಪತ್ರೆ ಕಟ್ಟಡ, ಪೀಠೋಪಕರಣ, ಸಿಬ್ಬಂದಿ ವಸತಿ ಗೃಹಗಳು ಮತ್ತು ಇತರೆ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲಾ ಕೇಂದ್ರವಾಗಿ ಇಪ್ಪತ್ತ್ಮೂರು ವರ್ಷಗಳೇ ಕಳೆದಿದ್ದು, ಜಿಲ್ಲೆಯ ಜನತೆಯ ಬಹುದಿನ ಬೇಡಿಕೆಯ ಈ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡುವ ಮೂಲಕ ಈಡೇರಿಸಿದಂತಾಗಿದೆ ಎಂದು ಗೊತ್ತಾಗಿದೆ.

'ಅಂಚೆ ಸುಕನ್ಯಾ' ಮೂಲಕ ಭಾಗ್ಯಲಕ್ಷ್ಮಿ: ಮುಖ್ಯಮಂತ್ರಿ ಯಡಿಯೂರಪ್ಪ ಕನಸಿನ 'ಭಾಗ್ಯ ಲಕ್ಷ್ಮಿ' ಬಾಂಡ್ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆಯ 'ಸುಕನ್ಯಾ ಸಮೃದ್ಧಿ' ಮೂಲಕ ಮುಂದುವರಿಸಲು ಸಚಿವ ಸಂಪುಟ ಸಭೆ ಅನುಮೊದನೆ ನೀಡಿದೆ. ಈ ಯೋಜನೆಗೆ ಎಲ್‍ಐಸಿ ಬದಲು ಅಂಚೆ ಇಲಾಖೆ ಏಜೆನ್ಸಿಯಾಗಿರುತ್ತದೆ ಎಂದು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಬಡತನ ರೇಖೆಗಿಂತ ಕೆಳಗಿರುವವರ (ಬಿಪಿಎಲ್) ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದರೆ ಅವರಿಗೆ ಭಾಗ್ಯಲಕ್ಷ್ಮಿ ಬಾಂಡ್ ನೀಡುವ ಯೋಜನೆ ಇದಾಗಿದೆ. ಹೆಣ್ಣು ಮಗುವಿಗೆ 18 ವರ್ಷ ತುಂಬಿದಾಗ 1 ಲಕ್ಷ ರೂ.ಬಾಂಡ್ ದೊರೆಯಲಿದೆ. ಎಲ್‍ಐಸಿ ಮೂಲಕ ಯೋಜನೆ ಅನುಷ್ಠಾನಕ್ಕೆ ಇದ್ದ ಕೆಲ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಇದೀಗ ಅಂಚೆ ಇಲಾಖೆ ಮೂಲಕ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಿಂಡಿ ಅಣೆಕಟ್ಟು ಕಾಮಗಾರಿಗೆ ಅಸ್ತು: ಪಶ್ಚಿಮ ವಾಹಿನಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಬಳಿ ಕಿಂಡಿ ಅಣೆಕಟ್ಟು ಕಾಮಗಾರಿಗೆ 46.70 ಕೋಟಿ ರೂ.ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆಯಡಿ ಕರಾವಳಿ 3 ಜಿಲ್ಲೆಗಳಿಗೆ ಹವಾಮಾನ ಮುನ್ಸೂಚನೆ ಮತ್ತು ಪ್ರಸರಣ ಪದ್ಧತಿಯ ಅನುಷ್ಠಾನಕ್ಕೆ 26.92 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗೊತ್ತಾಗಿದೆ.

ಕುಡಿಯುವ ನೀರಿನ ಯೋಜನೆ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಗೌತಮಪುರ ಮತ್ತು ಇತರ ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 91.50 ಕೋಟಿ ರೂ.ಒದಗಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯ ಚಿಕ್ಕನಾಗಮಂಗಲದಲ್ಲಿ ಫ್ರೆಂಚ್ ಕಂಪೆನಿ 500 ಮೆಟ್ರಿಕ್ ಟನ್ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕ ಸ್ಥಾಪನೆಗೆ ನೀಡಿದ್ದ ಅನುಮೋದನೆ ಹಿಂಪಡೆಯಲಾಗಿದೆ. ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳು 2020 ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲಾಸ್ಪತ್ರೆಯನ್ನು 115 ಕೋಟಿ ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಹಿಂದಿನ ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರ್ಥಿಕ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಉಡುಪಿ ಜಿಲ್ಲೆ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ'

-ಕೆ.ರಘುಪತಿ ಭಟ್, ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News