ವಿವಾದಿತ ಭೂ ಸುಧಾರಣೆಗಳ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ?

Update: 2020-10-22 15:38 GMT

ಬೆಂಗಳೂರು, ಅ. 22: ರೈತರು, ಪ್ರತಿಪಕ್ಷಗಳ ತೀವ್ರ ವಿರೋಧಕ್ಕೆ ಕಾರಣವಾಗಿರುವ ವಿವಾದಿತ `ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕ-2020'ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಭೂ ಸುಧಾರಣಾ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಅದನ್ನು ಸರಕಾರ ಹಿಂಪಡೆದಿತ್ತು. ಬಳಿಕ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಳ್ಳಲಾಗಿತ್ತು. ಆದರೆ, ವಿಧಾನ ಪರಿಷತ್‍ನಲ್ಲಿ ವಿಧೇಯಕಕ್ಕೆ ಅನುಮೋದನೆ ದೊರೆಯಲಿಲ್ಲ. ಆ ಹಿನ್ನೆಲೆಯಲ್ಲಿ ಇದೀಗ ಪುನಃ ತಿದ್ದುಪಡಿ ವಿಧೇಯಕ ಜಾರಿಗೆ ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಭೂ ಸುಧಾರಣೆ ಕಾಯ್ದೆ 1961ರ ಸೆಕ್ಷನ್ 79 ಎ, ಬಿ, ಸಿ ಮತ್ತು 80 ಅನ್ನು ಪೂರ್ವಾನ್ವಯವಾಗುವಂತೆ ರದ್ದುಪಡಿಸುವುದು ಹಾಗೂ ಪ್ರಸ್ತುತ ಬಾಕಿ ಉಳಿದಿರುವ 79 ಎ ಮತ್ತು ಬಿ ಪ್ರಕರಣಗಳ ವಜಾ, ಸೆಕ್ಷನ್ 63ರಡಿ ವ್ಯಕ್ತಿ ಅಥವಾ ಒಂದು ಕುಟುಂಬಕ್ಕೆ ಭೂಮಿ ಮಿತಿಯನ್ನು ಹೆಚ್ಚಿಸಲು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಡಿ ಅವಕಾಶ ಕಲ್ಪಿಸಲು ಸರಕಾರ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News