ನವೆಂಬರ್ 17ರಿಂದ ರಾಜ್ಯದಲ್ಲಿ ಪದವಿ, ಇಂಜಿನಿಯರಿಂಗ್ ಕಾಲೇಜು ಆರಂಭ

Update: 2020-10-23 16:07 GMT

ಬೆಂಗಳೂರು, ಅ. 23: ಮಾರಕ ಕೋವಿಡ್-19 ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮುನ್ನಚ್ಚರಿಕೆಗಳೊಂದಿಗೆ ನವೆಂಬರ್ 17ರಿಂದ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜುಗಳ ಪುನರ್ ಆರಂಭಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಶಿಕ್ಷಣ, ಆರೋಗ್ಯ, ಸಾರಿಗೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಮಾಹಿತಿ ನೀಡಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜು ಹಾಜರಾತಿ ಕಡ್ಡಾಯವಲ್ಲ, ಕಲಿಕೆಯನ್ನು ಕಾಲೇಜಿಗೆ ಬಂದು ಕಲಿಯಲು ಬಯಸುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಜೊತೆಗೆ ಆನ್‍ಲೈನ್ ಕಲಿಕೆಗೂ ಅವಕಾಶವಿರಲಿದ್ದು, ಇದು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟದ್ದು. ಪೋಷಕರ ಒಪ್ಪಿಗೆ ಪಡೆದು ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಬಹುದು ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು.

ಕೇಂದ್ರ ಸರಕಾರ ಮತ್ತು ಯುಜಿಸಿ ಮಾರ್ಗಸೂಚಿ ಅನ್ವಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡು ನ.17ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ ಎಂದ ಅವರು, ಪ್ರತಿ ಕಾಲೇಜು ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಜೊತೆಗೆ ಜಿಲ್ಲಾ ಮಟ್ಟದಲ್ಲಿಯೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್‍ಫೋರ್ಸ್ ಇರಲಿದೆ. ವಿದ್ಯಾರ್ಥಿಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.

ಮಾಸ್ಕ್ ಕಡ್ಡಾಯ: ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದ ಡಾ.ಅಶ್ವತ್ಥ ನಾರಾಯಣ, ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳಿಂದ ಒತ್ತಡವಿತ್ತು. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಸುರಕ್ಷತೆಯೊಂದಿಗೆ ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ಕಾಲೇಜು ಆರಂಭಕ್ಕೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳ ಸುರಕ್ಷತೆಗೂ ಸರಕಾರ ಕ್ರಮ ವಹಿಸಲಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಲಿದ್ದು, ಪ್ರತಿ ಕಾಲೇಜುಗಳಲ್ಲೂ ಇದರ ನಿರ್ವಹಣೆಗೆ ಕಾರ್ಯಪಡೆ ಇರಲಿದೆ. ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳೂ ಇದೆ ಸಂದರ್ಭದಲ್ಲಿ ಆರಂಭವಾಗಲಿವೆ ಎಂದು ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.

ಸಭೆಯಲ್ಲಿ ಶಿಕ್ಷಣ ಸುಧಾರಣೆಗಳ ಸಲಹೆಗಾರ ಹಾಗೂ ಶಿಕ್ಷಣ ತಜ್ಞ ಪ್ರೊ.ಎಂ.ಆರ್.ದೊರೆಸ್ವಾಮಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಎನ್. ಕುಮಾರ್ ನಾಯಕ್, ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಕುಮಾರ್ ಸೇರಿದಂತೆ ಇನ್ನಿತರ ಇಲಾಖೆ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪದವಿ ಕಾಲೇಜುಗಳನ್ನು ಆರಂಭಿಸಬೇಕೆಂದು ವಿದ್ಯಾರ್ಥಿಗಳಿಂದಲೇ ಬೇಡಿಕೆ ಬಂದಿದ್ದು, ಕ್ಯಾಂಪಸ್ ಸಂದರ್ಶನ(ಇಂಟರ್‍ವ್ಯೂ, ಪ್ಲೇಸ್‍ಮೆಂಟ್) ಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಇವರೆಲ್ಲರಿಗೂ ಸೂಕ್ತ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಲು ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ಹಲವು ಸುತ್ತಿನ ಪೂರ್ವಭಾವಿ ಸಭೆ ನಡೆಸಿ ಸಜ್ಜಾಗಿದೆ. ಆನ್‍ಲೈನ್ ಶಿಕ್ಷಣವನ್ನು ಮುಂದುವರಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಅಭಿಪ್ರಾಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ'
-ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

ನ.17ರಿಂದ ಪದವಿ ಕಾಲೇಜು ಆರಂಭ ಮತ್ತು ನಿರ್ವಹಣೆ ಸಂಬಂಧ ದೇಶದಲ್ಲೆ ಇದೇ ಮೊದಲ ಬಾರಿಗೆ ಆನ್‍ಲೈನ್ ಪೋರ್ಟಲ್‍ಗೆ ಚಾಲನೆ ನೀಡಲಾಗುವುದು. 5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪೋರ್ಟಲ್‍ನ ಪ್ರಯೋಜನ ಪಡೆಯಲಿದ್ದು, ಶಿಕ್ಷಕರ ಬೋಧನಾ ಮಟ್ಟ ಮತ್ತು ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ'

-ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News