ದಕ್ಷಿಣ ಒಳನಾಡು-ಕರಾವಳಿ ಭಾಗದಲ್ಲಿ ಅ.30ರವರೆಗೆ ಮಳೆ ಮುಂದುವರಿಯವ ಸಾಧ್ಯತೆ: ಹವಾಮಾನ ಇಲಾಖೆ

Update: 2020-10-26 12:59 GMT

ಬೆಂಗಳೂರು, ಅ.26: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಅ.26ರಿಂದ 30ರವರೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಉತ್ತರ ಒಳನಾಡಿನಲ್ಲಿ ಸೋಮವಾರ ಮಳೆಯಾಗುವ ಸಾಧ್ಯತೆ ಇದ್ದು, ನಂತರ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಕೇರಳದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅ.30ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅ.27 ಮತ್ತು 28ರಂದು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಸೋಮವಾರ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಗದಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೇರಳದ ಹಲವೆಡೆ ಮಳೆಯಾಗುತ್ತಿರುವುದರಿಂದ ಅದರ ಪರಿಣಾಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆ ಹೆಚ್ಚಾಗಲಿದೆ. ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News