ಉಡುಪಿ ಜಿಲ್ಲೆಯಲ್ಲಿ 44 ಮಂದಿಗೆ ಕೊರೋನ ಪಾಸಿಟಿವ್

Update: 2020-10-26 13:19 GMT

ಉಡುಪಿ, ಅ. 26: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ ಕೇವಲ 44 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಅಲ್ಲದೇ 199 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 44 ಮಂದಿಯಲ್ಲಿ ಮಕ್ಕಳು ಸೇರಿದಂತೆ 20 ಮಂದಿ ಪುರುಷರು ಹಾಗೂ 24 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 15 ಪುರುಷರು ಹಾಗೂ 21 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 19, ಕುಂದಾಪುರ ತಾಲೂಕಿನ 19 ಹಾಗೂ ಕಾರ್ಕಳ ತಾಲೂಕಿನ 6 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 44 ಮಂದಿಯಲ್ಲಿ 3 ಮಂದಿಯನ್ನು ಮಾತ್ರ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿದರೆ, ಉಳಿದ 41 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

199 ಮಂದಿ ಗುಣಮುಖ

ರವಿವಾರ ಒಟ್ಟು 175 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 20,301 ಆಗಿದೆ. ಜಿಲ್ಲೆಯಲ್ಲಿ ಸದ್ಯ 1101 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯು ತಿದ್ದಾರೆ ಎಂದವರು ವಿವರಿಸಿದರು.

2199 ನೆಗೆಟಿವ್ 

ಜಿಲ್ಲೆಯಲ್ಲಿ ರವಿವಾರ ಒಟ್ಟು 2260 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 2199 ಮಂದಿ ನೆಗೆಟಿವ್ ಬಂದಿದ್ದು, 61 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,597 ಆಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ರವಿವಾರದವರೆಗೆ ಒಟ್ಟು 1,72,843 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,51,246 ಮಂದಿ ನೆಗೆಟಿವ್ ಹಾಗೂ 21,597 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 20,301 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಒಟ್ಟು 179 ಮಂದಿ ಮೃತಪಟ್ಟಿದ್ದಾರೆ.

ವೃದ್ಧರ ಸಾವು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸೋಮವಾರ ಉಡುಪಿ ತಾಲೂಕಿನ 71 ವರ್ಷ ಪ್ರಾಯದ ಹಿರಿಯ ನಾಗರಿಕರೊಬ್ಬರು ಮೃತ ಪಟ್ಟಿದ್ದಾರೆ. ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿದ್ದ ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದರು. ಇದರಿಂದ ಆರೋಗ್ಯ ವಿಷಮಿಸಿ ಮೃತ ಪಟ್ಟಿದ್ದಾರೆ. ಈ ಮೂಲಕ ಕೋವಿಡ್‌ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 179ಕ್ಕೇರಿದೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News