ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Update: 2020-10-26 16:12 GMT

ಮೊದಲ ಬಾರಿ ಶ್ರೀಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು ಆನೆ
ಮೈಸೂರು,ಅ.26: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯನ್ನು ನಾಡ ಅಧಿದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ 3.54 ಗಂಟೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಮೊದಲ ಬಾರಿಗೆ ಅಭಿಮನ್ಯು ಆನೆ ಹೊತ್ತ ಚಿನ್ನದ ಅಂಬಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿ ಕೈ ಮುಗಿದು ನಮಸ್ಕರಿಸಿದರು. 

ಕೊರೋನ ಕಾರಣ ಸರಳ ದಸರಾ ಆಚರಣೆ ಹಿನ್ನಲೆಯಲ್ಲಿ ಅರಮನೆ ಆವರಣದೊಳಗೆ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಶ್ರೀಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಇದೇ ವೇಳೆ 21 ಸುತ್ತು ಕುಶಾಲತೋಪು ಸಿಡಿಸಲಾಯಿತು.

ಪುಷ್ಪಾರ್ಚನೆ ವೇಳೆ ಮುಖ್ಯಮಂತ್ರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ರಾಜವಂಶಸ್ಥ ಯದುವೀರ್ ಕೃಷ್ಣರಾಜ ಒಡೆಯರ್, ಮೇಯರ್ ತಸ್ನೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಉಪಸ್ಥಿತರಿದ್ದರು.

ಅಂಬಾರಿ ಹೊತ್ತ ಅಭಿಮನ್ಯು ಆನೆ ಜೊತೆ ಕಾವೇರಿ, ವಿಜಯ ಅಕ್ಕ ಪಕ್ಕದಲ್ಲಿ ಹಾಗೂ ಗೋಪಿ, ವಿಕ್ರಮ ಆನೆಗಳು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದವು.

ಮಂಗಳವಾದ್ಯ ನಾದಸ್ವರ, ಡೋಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊರೊನಾ ಜಾಗೃತಿ ಮೂಡಿಸುವ ಮಾಸ್ಕ್ ಧರಿಸಿದ್ದ ಮಹಿಳೆ ಹೊತ್ತ ಟ್ಯಾಬ್ಲೊ ಸಾಗಿತು. ನಂತರ ದಕ್ಷಿಣ ಕನ್ನಡ ಶೈಲಿಯ ಕಲಾಪ್ರಕಾರಗಳ ತಂಡ ಸಾಗಿತು.

ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ವೇಳೆ ಸುಮಾರು 500 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕೊರೋನ ನಿಯಂತ್ರಣದ ತಂಡ ದಸರಾ ಉದ್ಘಾಟನೆ ವೇಳೆ ಚಾಮುಂಡಿ ಬೆಟ್ಟದಲ್ಲಿ 200 ಮಂದಿ, ಜಂಬೂ ಸವಾರಿ ವೇಳೆ 300 ಮಂದಿಗಷ್ಟೇ ಅವಕಾಶ ನೀಡಬೇಕು ಎಂದು ಸೂಚಿಸಲಾಗಿತ್ತು. 

ಮುಖ್ಯಮಂತ್ರಿಗಳ ಜೊತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವ ಸಿ.ಟಿ.ರವಿ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹರ್ಷವರ್ಧನ್, ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಸೇರಿದಂತೆ ಹಲವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News