ಉಡುಪಿ : 62 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢ

Update: 2020-10-29 13:32 GMT

ಉಡುಪಿ, ಅ.29: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗುರುವಾರ 62 ಮಂದಿಯಲ್ಲಿ ಹೊಸದಾಗಿ ದೃಢಪಟ್ಟಿದೆ. ದಿನದಲ್ಲಿ 77 ವರ್ಷ ಪ್ರಾಯದ ಹಿರಿಯರೊಬ್ಬರು ಸೋಂಕಿನಿಂದ ಮೃತ ಪಟ್ಟಿದ್ದು, 111 ಮಂದಿ ಚಿಕಿತ್ಸೆಯ ಬಳಿಕ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 62 ಮಂದಿಯಲ್ಲಿ ಮಕ್ಕಳು ಸೇರಿದಂತೆ 34 ಮಂದಿ ಪುರುಷರು ಹಾಗೂ 28 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 15 ಪುರುಷರು ಹಾಗೂ 16 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 35, ಕುಂದಾಪುರ ತಾಲೂಕಿನ 16 ಹಾಗೂ ಕಾರ್ಕಳ ತಾಲೂಕಿನ 10 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಚಿಕಿತ್ಸೆಗೆಂದು ಹೊರಜಿಲ್ಲೆಯಿಂದ ಬಂದ ಒಬ್ಬರು ಸಹ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 62 ಮಂದಿಯಲ್ಲಿ ಒಬ್ಬರು ಮಾತ್ರ ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರೆ, ಉಳಿದ 61 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

111 ಮಂದಿ ಗುಣಮುಖ: ಬುಧವಾರ ಒಟ್ಟು 111 ಮಂದಿ ಸೋಂಕಿ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈಗ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 20,741 ಆಗಿದೆ. ಜಿಲ್ಲೆಯಲ್ಲಿ ಸದ್ಯ 871 ಮಂದಿ ಸಕ್ರಿಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

1727 ನೆಗೆಟಿವ್:  ಜಿಲ್ಲೆಯಲ್ಲಿ ಬುಧವಾರ ಒಟ್ಟು 1792 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1727 ಮಂದಿ ನೆಗೆಟಿವ್ ಬಂದಿದ್ದು, 65 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,793 ಆಗಿದೆ.

ಜಿಲ್ಲೆಯಲ್ಲಿ ಬುಧವಾರದವರೆಗೆ ಒಟ್ಟು 1,79,428 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,57,635 ಮಂದಿ ನೆಗೆಟಿವ್ ಹಾಗೂ 21,793 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 20,741 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 182 ಮಂದಿ ಮೃತಪಟ್ಟಿದ್ದಾರೆ.

ಮತ್ತೊಬ್ಬ ಹಿರಿಯರ ಬಲಿ: ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸೋಂಕಿಗೆ ಉಡುಪಿ ತಾಲೂಕಿನ 77 ವರ್ಷ ಪ್ರಾಯದ ಹಿರಿಯ ನಾಗರಿಕರೊಬ್ಬರು ಮೃತ ಪಟ್ಟಿದ್ದಾರೆ. ಹೃದಯ ಸಮಸ್ಯೆ ಇದ್ದ ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಕೋವಿಡ್‌ಗೆ ಪಾಸಿಟಿವ್ ಬಂದಿದ್ದರು. ಆದರೆ ಚಿಕಿತ್ಸೆಯ ನಡುವೆಯೇ ಅವರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News