ಗುಜರಾತ್ ಮಾಜಿ ಸಿಎಂ ಕೇಶು ಭಾಯಿ ಪಟೇಲ್ ನಿಧನಕ್ಕೆ ಬಿಎಸ್‌ವೈ ಸೇರಿ ಗಣ್ಯರ ಸಂತಾಪ

Update: 2020-10-29 14:11 GMT

ಬೆಂಗಳೂರು, ಅ.29: ಗುಜರಾತಿನ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಇನ್ನಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಶುಭಾಯಿ ಪಟೇಲ್ ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಎರಡು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು. ಸಮಾಜದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ ಅವರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

1995ರಲ್ಲಿ ಮತ್ತು 1998ರಿಂದ 2001ರ ಅವಧಿಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಕೇಶುಭಾಯಿ ಪಟೇಲ್, ಭಾರತೀಯ ಜನಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದು, ಬಿಜೆಪಿ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. 1945ರಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿದ್ದ ಅವರು, 1975ರಲ್ಲಿ ತುರ್ತು ಪರಿಸ್ಥಿತಿಯಲ್ಲಿ ಜೈಲುವಾಸ ಅನುಭವಿಸಿದ್ದರು. ಅವರ ನಿಧನದಿಂದ ಹಿರಿಯ ಮುಖಂಡರನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News