ದ.ಕ. ಜಿಲ್ಲೆಯಲ್ಲಿ ಮೆಗಾ ಸೀ ಫುಡ್ ಪಾರ್ಕ್ ಶೀಘ್ರ ನಿರ್ಮಾಣ: ಸಚಿವ ಕೋಟ

Update: 2020-11-01 07:59 GMT

ಮಂಗಳೂರು, ನ.1: ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ಜಿಲ್ಲೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಮೆಗಾ ಸೀ ಫುಡ್ ಪಾರ್ಕ್ ಶೀಘ್ರವೇ ನಿರ್ಮಾಣವಾಗಲಿದೆ ಎಂದು ರಾಜ್ಯದ ಮೀನುಗಾರಿಕೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನೆಹರೂ ಮೈದಾನದಲ್ಲಿ ಅವರು ಇಂದು ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು. ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯು ವನ್ಯಜೀವಿಗಳಿಂದ ಸಂಭವಿಸುವ ಮಾನವ ಪ್ರಾಣಹಾನಿ ಪ್ರಕರಣಗಳಿಗೆ ನೀಡಲಾಗುತ್ತಿದ್ದ 5 ಲಕ್ಷ ರೂ. ದಯಾತ್ಮಕ ಧನವನ್ನು 7.50 ಲಕ್ಷ ರೂ.ಗೆ ಪರಿಷ್ಕರಿಸಿ ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್ ಸಂದರ್ಭ ಹೇರಲಾದ ಲಾಕ್‌ಡೌನ್ ವೇಳೆ 7 ಲಕ್ಷ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಜಿಲ್ಲೆಯ 8 ಮೆಡಿಕಲ್ ಕಾಲೇಜು ಸೇರಿದಂತೆ 9 ಪ್ರಯೋಗಾಲಯಗಳು ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷಾ ಸೌಲಭ್ಯ ಒದಗಿಸುತ್ತಿದೆ. ದ.ಕ.ಜಿಲ್ಲೆಯಲ್ಲಿ ಒಟ್ಟು 73 ಆಸ್ಪತ್ರೆಗಳು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ಅಳವಡಿಸಿಕೊಂಡು ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ ಎಂದವರು ಹೇಳಿದರು.

ಕನ್ನಡ ಕಲಿಕೆಯ ಎಲ್ಲ ಆಸಕ್ತರಿಗೆ ಇ ಕನ್ನಡ ಕಲಿಕಾ ಅಕಾಡಮಿಯನ್ನು ಸ್ಥಾಪಿಸಿ ಪ್ರತ್ಯೇಕ ಅಂತರ್ಜಾಲ ವೆಬ್ ಸೈಟ್ ಸಿದ್ಧಪಡಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನೂತನ ಕೈಗಾರಿಕಾ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ 27 ಮಂದಿಗೆ ವೈಯಕ್ತಿಕ ಹಾಗೂ 11 ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ದಿವಾಕರ ಪಾಂಡೇಶ್ವರ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಸೆಲ್ವಮಣಿ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಮೊದಲಾದವರು ಉಪಸ್ಥಿತರಿದ್ದರು.

ಸರಳ ರಾಜ್ಯೋತ್ಸವ: ಕೋವಿಡ್ ಕರಿಛಾಯೆ ರಾಷ್ಟ್ರೀಯ, ನಾಡ ಹಬ್ಬ ಹರಿದಿನಗಳ ಮೇಲೂ ಬಿದ್ದಿರುವುದರಿಂದ ನಿಯಮಗಳ ಅನುಸರಣೆ, ಹೆಚ್ಚು ಜನಸಂದಣಿ ಸೇರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಬಾರಿಯ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಗಿತ್ತು.


ವಿವಿಧ ಭಾಷೆ, ವೈವಿಧ್ಯ ಹೊಂದಿರುವ ದೇಶದಲ್ಲಿ ಪ್ರಾಂತ್ಯ ಭಾಷೆಗಳಿಗೆ ಪ್ರಾಧಾನ್ಯತೆ ನೀಡಬೇಕೆಂಬುದು ಮಹಾತ್ಮ ಗಾಂಧೀಜಿ ಕನಸಾಗಿತ್ತು. ಅದರಂತೆ ನಮ್ಮ ಸರಕಾರ ರಾಜ್ಯದ ಆಡಳಿತ ಹಾಗೂ ಶಿಕ್ಷಣದಲ್ಲಿ ಕನ್ನಡವನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಪಣತೊಟ್ಟಿದೆ.

-ಕೋಟ ಶ್ರೀನಿವಾಸ ಪೂಜಾರಿ, ಉಸ್ತುವಾರಿ ಸಚಿವರು, ದ.ಕ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News