ಉಪಚುನಾವಣೆ ಗೆದ್ದರೆ ಡಿಕೆಶಿ ಸಿಎಂ ಆಗುತ್ತಾರಾ?: ಸಚಿವ ಶ್ರೀರಾಮುಲು ವ್ಯಂಗ್ಯ

Update: 2020-11-02 12:44 GMT

ಬಳ್ಳಾರಿ, ನ.2: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರಾ? ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದರೆ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿದುಕೊಂಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಈಗಾಗಲೇ ಆ ಕುರ್ಚಿಯನ್ನು ಅಲಂಕರಿಸಿದ್ದಾರೆ. ಅದನ್ನು ಅರಿತುಕೊಂಡು ಡಿ.ಕೆ ಶಿವಕುಮಾರ್ ಮುನ್ನಡೆಯಬೇಕು ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳೇ ಗೆಲ್ಲೋದು. ಚುನಾವಣಾ ಫಲಿತಾಂಶದವರೆಗೆ ಕಾದು ನೋಡಿ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಒಣ ಪ್ರತಿಷ್ಠೆಯಿಂದಲೇ ಈ ಎರಡು ಕ್ಷೇತ್ರಗಳು ಜಿದ್ದಾ ಜಿದ್ದಿನ ಕಣಗಳಾಗಿ ಮಾರ್ಪಟ್ಟಿವೆ. ಅವರಿಬ್ಬರ ನಡುವಿನ ಒಳ ಜಗಳ ನಮಗೆ ವರದಾನವಾಗಲಿದೆ ಎಂದು ಹೇಳಿದರು.

ಸಿಎಂ ಬಿಎಸ್‍ವೈ ಅವರ ಪುತ್ರ ವಿಜಯೇಂದ್ರ ಕೈ ಇಟ್ಟಲೆಲ್ಲಾ ಬಿಜೆಪಿ ಗೆಲುವು ಖಚಿತವಾಗಿದೆ. ಅದರಂತೆಯೇ ಶಿರಾ ಹಾಗೂ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. ವಿಜಯೇಂದ್ರ ಅವರಂತಹ ಯುವ ನಾಯಕರು ಪಕ್ಷದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯ ಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News