×
Ad

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸರಕಾರಕ್ಕೆ ಪ್ರಸ್ತಾವನೆ: ಜಿಲ್ಲಾಧಿಕಾರಿ

Update: 2020-11-02 22:02 IST

ಉಡುಪಿ, ನ.2: ಕೇಂದ್ರ ಸರಕಾರ ನಿಗದಿಪಡಿಸಿದ ಬೆಂಬಲ ಬೆಲೆ ಯೋಜನೆ ಯಡಿಯಲ್ಲಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್‌ಗೆ 1,868 ರೂ. ದರದಲ್ಲಿ ಮತ್ತು ಗ್ರೇಡ್ ಎ ಭತ್ತವನ್ನು ಕ್ವಿಂಟಾಲ್ ಗೆ 1,888 ರೂ. ದರದಲ್ಲಿ ಖರೀದಿಸುವಂತೆ ತಿಳಿಸಿದರು.

ಭತ್ತ ಖರೀದಿ ಕೇಂದ್ರಕ್ಕೆ ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದ ಅವರು, ಭತ್ತ ಖರೀದಿಗೆ ಅಗತ್ಯವಿರುವ ಮೊತ್ತವನ್ನು ಕೃಷಿ ಮಾರಾಟ ಇಲಾಖೆಯ ಆವರ್ತ ನಿಧಿಯಿಂದ ಭರಿಸುವಂತೆ ಅವರು ಸೂಚಿಸಿದರು. ಕೃಷಿ ಇಲಾಖೆ ವತಿಯಿಂದ ಭತ್ತ ಖರೀದಿ ಕೇಂದ್ರಕ್ಕೆ ಗ್ರೇಡರ್ ಸಿಬ್ಬಂದಿಯನ್ನು ನಿಯೋಜಿಸಲು ಮತ್ತು ಭತ್ತದ ತೇವಾಂಶ ಪರಿಶೀಲಿಸಲು ಮಾಯಿಶ್ಚರ್ ಮೀಟರ್ ಒದಗಿಸಲು ಕೃಷಿ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಎಪಿಎಂಸಿ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News