ಅಶೋಕ್ ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಡಿ.1ಕ್ಕೆ ಚುನಾವಣೆ

Update: 2020-11-02 17:27 GMT

ಬೆಂಗಳೂರು, ನ.2: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ನಾಮಪತ್ರಗಳನ್ನು ಸಲ್ಲಿಸಲು ನ.18ರವರೆಗೆ ಕಾಲಾವಕಾಶವಿದ್ದು, ನ.19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಉಮೇದುವಾರಿಕೆಯನ್ನು ಹಿಂಪಡೆಯಲು ನ.23ರ ವರೆಗೆ ಅವಕಾಶವಿದೆ. ಡಿಸೆಂಬರ್ 1ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತಗಳ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದೆ.

ರಾಯಚೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದ ಅಶೋಕ್ ಗಸ್ತಿ, ಪ್ರಸಕ್ತ ಸಾಲಿನ ಜೂನ್‍ನಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ ಜೊತೆ ಅವಿರೋಧವಾಗಿ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದ್ದರು. ಆದರೆ, ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News