×
Ad

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2020-11-02 22:25 IST

ಹೊಸದಿಲ್ಲಿ, ನ. 2: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ರಾಹುಲ್ ಗಾಂಧಿ ಅವರ ಆಯ್ಕೆ ಪ್ರಶ್ನಿಸಿ ಮನವಿ ಸಲ್ಲಿಸಿರುವ ಸರಿತಾ ನಾಯರ್ ಅವರ ಪರವಾಗಿ ಯಾರೂ ಹಾಜರಾಗದ ಹಿನ್ನಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ರಾಮಸುಬ್ರಹ್ಮಣೀಯನ್ ಅವರನ್ನೊಳಗೊಂಡ ನ್ಯಾಯ ಪೀಠ ಪ್ರಕರಣದ ವಿಚಾರಣೆಯನ್ನು ಆರಂಭದಲ್ಲಿ ಬದಿಗಿರಿಸಿತು. ಅನಂತರ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ, ಕೇರಳ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ತಿರಸ್ಕರಿಸಿತು.

ವಯನಾಡ್ ಹಾಗೂ ಎರ್ನಾಕುಳಂನಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಶ್ನಿಸಿ ಸಲ್ಲಿಸಲಾದ ಮನವಿಯನ್ನು ಕೇರಳ ಹೈಕೋರ್ಟ್ 2019 ಅಕ್ಟೋಬರ್ 31ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸರಿತಾ ನಾಯರ್ ಅವರು ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದರು. ರಾಜ್ಯದಲ್ಲಿ ಸೋಲಾರ್ ಹಗರಣಕ್ಕೆ ಸಂಬಂಧಿಸಿದ ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿ ಹಾಗೂ ಶಿಕ್ಷೆಗೊಳಗಾಗಿದ್ದ ಹಿನ್ನೆಲೆಯಲ್ಲಿ ವಯನಾಡ್ ಹಾಗೂ ಎರ್ನಾಕುಳಂ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಲು ಸರಿತಾ ನಾಯರ್ ಸಲ್ಲಿಸಿದ ನಾಮಪತ್ರವನ್ನು ಚುನಾವಣಾ ಅಧಿಕಾರಿ ತಿರಸ್ಕರಿಸಿದ್ದರು. ಸರಿತಾ ನಾಯರ್ ತನ್ನ ವಕೀಲರ ಮೂಲಕ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಜೂನ್ 10ರಂದು ವಿಚಾರಣೆಗೆ ಪರಿಗಣಿಸಿತ್ತು ಹಾಗೂ ನವೆಂಬರ್ 2ಕ್ಕೆ ವಿಚಾರಣೆ ನಿಗದಿಪಡಿಸಿತ್ತು.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News