ರಾಜ್ಯಾದ್ಯಂತ ನ.4ರಿಂದ ಮೂರು ದಿನಗಳ ಕಾಲ ಸಾಧಾರಣ ಮಳೆ ಸಾಧ್ಯತೆ

Update: 2020-11-02 18:14 GMT

ಬೆಂಗಳೂರು, ನ.2: ಅರಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನ.4ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದೆ. ಅಲ್ಲದೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ನ.4ರ ನಂತರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದೊಂದು ವಾರದಿಂದ ರಾಜ್ಯದಲ್ಲಿ ಒಣಹವೆ ಮುಂದುವರೆದಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಎರಡುಮೂರು ಮೇಲ್ಮೈ ಸುಳಿಗಾಳಿಗಳು ಉಂಟಾಗಿವೆ. ತಮಿಳುನಾಡಿನ ಚೆನ್ನೈ ಸಮೀಪದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಲ್ಲದೆ ಅರಬ್ಬೀ ಸಮುದ್ರದಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ತೀರಾ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಇನ್ನೆರಡು ದಿನ ಒಣಹವೆ ಕಂಡುಬಂದಿದೆ. ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ನ.4ರ ನಂತರ ಉತ್ತರ ಕರ್ನಾಟಕ ಹೊರತುಪಡಿಸಿ ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ನೈರುತ್ಯ ಮುಂಗಾರು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಿದೆ. ಈಗಾಗಲೇ ಮುಂಗಾರು ಹಂಗಾಮಿನ ವಿವಿಧ ಬೆಳೆಗಳು ಕೊಯ್ಲಿಗೆ ಬಂದಿದ್ದು ಮಳೆಯ ಅವಶ್ಯಕತೆ ಇಲ್ಲ. ಆದರೆ ಅಕ್ಟೋಬರ್‍ನಲ್ಲಿ ಬಿದ್ದ ಭಾರೀ ಮಳೆ ಹಾಗೂ ಪ್ರವಾಹದಿಂದ ಬಹಳಷ್ಟು ಬೆಳೆ ನಷ್ಟ  ಉಂಟಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News