×
Ad

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನ:ಶ್ಚೇತನಕ್ಕೆ ತುರ್ತು ಸಾಲ ಒದಗಿಸಲು ದ.ಕ. ಡಿಸಿ ಸೂಚನೆ

Update: 2020-11-04 20:37 IST

ಮಂಗಳೂರು, ನ.4: ಕೋವಿಡ್-19 ಮತ್ತು ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರವ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತುರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ ಸೂಚಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ‘ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನ ಸೋಂಕು ನಿಯಂತ್ರಣಕ್ಕೆ ರಾಷ್ಟ್ರದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿತ್ತು. ಇದರಿಂದಾಗಿ ಅನೇಕರು ಉದ್ಯೋಗ ವಂಚಿತರಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ಸಹಾಯ ಒದಗಿಸಲು ರೂಪಿಸಲಾದ ಯೋಜನೆಯನ್ನು ಅರ್ಹರಿಗೆ ನೀಡಲು ಅಧಿಕಾರಿಗಳು ಆದ್ಯತೆ ನೀಡಬೇಕು ಎಂದರು.

ಅರ್ಹ ಫಲಾನುಭವಿಗಳಿಗೆ 10,000 ರೂ. ಬ್ಯಾಂಕ್ ಸಾಲವನ್ನು ಶೇ.7 ಬಡ್ಡಿ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಇದನ್ನು 12 ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ. ಈ ಯೋಜನೆಯ ಡಿಜಿಟಲ್ ವ್ಯವಹಾರ ಪ್ರೋತ್ಸಾಹ ನೀಡುವುದರೊಂದಿಗೆ ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ 1,200 ರೂ.ಕ್ಯಾಶ್‌ಬ್ಯಾಕ್ ಪಡೆಯಲು ಅವಕಾಶವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಮನಪಾ ಜಂಟಿ ಆಯುಕ್ತ ಸಂತೋಷ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News