ಒಂದು ವರ್ಷ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಕೈಬಿಡಿ: ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ನ. 5: `ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆ ರಾಜ್ಯದ ಜನತೆಗೆ ಹೊರೆಯಾಗಲಿದ್ದು, ಒಂದು ವರ್ಷ ಕಾಲ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರಕಾರ ಕೈಬಿಡಬೇಕು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಆಗ್ರಹಿಸಿದ್ದಾರೆ.
ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೊರೋನ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇನೆ' ಎಂದು ತಿಳಿಸಿದ್ದಾರೆ.
ಕೊರೋನ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು. ಪ್ರತಿ ಯೂನಿಟ್‍ಗೆ 20ಪೈಸೆಯಿಂದ 50 ಪೈಸೆವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಕೈಬಿಡಬೇಕು' ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.