ಬೆಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ಅಶೋಕ್ ಕುಮಾರ್ ಆತ್ಮಹತ್ಯೆ

Update: 2020-11-08 13:32 GMT

ಬೆಂಗಳೂರು, ನ. 8: ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಅಶೋಕ್ ಕುಮಾರ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕೆ.ಎ.ಎಸ್. ಕಾಲನಿಯಲ್ಲಿ ವಾಸವಾಗಿದ್ದ ಪ್ರೊ.ಅಶೋಕ್ ಕುಮಾರ್ ಅವರು ರವಿವಾರ ತಡರಾತ್ರಿ ಮನೆಯ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರವಿವಾರ ಮುಂಜಾನೆ ಕುಟುಂಬಸ್ಥರು ಅಶೋಕ್ ಕುಮಾರ್ ಅವರು ಮಲಗಿದ್ದ ಕೊಠಡಿ ತೆರೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ತದನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದರು.

ಆತ್ಮಹತ್ಯೆಗೂ ಮುನ್ನ `ನನ್ನ ಸಾವಿಗೆ ನಾನೇ ಕಾರಣ' ಎಂದು ಅಶೋಕ್ ಕುಮಾರ್ ಅವರು ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಅವರು ಮೈಸೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರು. ನಂತರ ಭಾರತೀಯ ವಿದ್ಯಾಭವನ, ಬೆಂಗಳೂರು ವಿವಿಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಆತ್ಮಹತ್ಯೆ ಪ್ರಕರಣ ಸಂಬಂಧ ಮೈಕೋಲೇಔಟ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News