ಪರ್ಕಳ ರಾ.ಹೆದ್ದಾರಿ ಕಾಮಗಾರಿ ಅಪೂರ್ಣ: ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ಉಡುಪಿ, ನ.7: ಪರ್ಕಳದಲ್ಲಿ ಜನರಿಗೆ ಸಮಸ್ಯೆಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 169ಎ ಇದರ ಅಪೂರ್ಣ ಕಾಮಗಾರಿಯ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ನೊಂದ ಪರ್ಕಳ ಪರಿಸರದ ಮಹಿಳೆಯರು ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.
ಪರ್ಕಳ ಬಿ.ಎಂ. ಸ್ಕೂಲ್‌ನಿಂದ ಕೆಳ ಪರ್ಕಳವರೆಗಿನ ರಸ್ತೆ ಕಾಮಗಾರಿ ಪೂರ್ಣವಾಗದೇ ಸಾಕಷ್ಟು ತೊಂದರೆಯಾಗುತ್ತಿದೆ. ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಅಗೆದು ವರ್ಷಗಳೇ ಕಳೆದರೂ ಕಾಮಗಾರಿ ಇನ್ನೂ ಮುಂದುವರಿದಿಲ್ಲ. ಪ್ರತಿದಿನವೂ ಇಲ್ಲಿ ಅಪಘಾತ ಸಂಭವಿಸುತ್ತಿ ರುತ್ತದೆ. ವಾಹನ ದಟ್ಟಣೆಯಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ವುಹಿಳೆಯರು ಮನವಿಯಲ್ಲಿ ದೂರಿದ್ದಾರೆ.
ಅಭಿವೃದ್ಧಿ ಕಾಮಗಾರಿ ಮಾಡದೇ ಇದ್ದ ಮೇಲೆ ಯಾವ ಕಾರಣಕ್ಕೆ ರಸ್ತೆಯನ್ನು ಅಗೆದು ಹಾಳುಗೆಡವಿದ್ದೀರಿ? ಈಗಾಗಲೇ ಈ ಮಾರ್ಗದಲ್ಲಿ ಸಾವು, ನೋವು ಸಂಭವಿಸಿದೆ. ಇನ್ನಷ್ಟು ಅವಘಡ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗು ವುದು ಎಂದು ಜಿಲ್ಲಾಡಳಿತಕ್ಕೆ ಮಹಿಳೆಯರು ಎಚ್ಚರಿಕೆ ನೀಡಿದರು.
ಈ ಕುರಿತು ಶಾಸಕ ಕೆ.ರಘುಪತಿ ಭಟ್, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಮನವಿ ಸಲ್ಲಿಸ ಲಾಯಿತು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ, ಮಹೇಶ್ ಠಾಕೂರ್ ಉಪಸ್ಥಿತರಿದ್ದರು.