ಡಿಸೆಂಬರ್ ಅಂತ್ಯದ ವರೆಗೂ ರಾಜ್ಯದಲ್ಲಿ ಆಗಾಗ ಮಳೆ ಸಾಧ್ಯತೆ: ಹವಾಮಾನ ಇಲಾಖೆ
Update: 2020-11-08 19:16 IST
ಬೆಂಗಳೂರು, ನ. 8: ರಾಜ್ಯದಲ್ಲಿ ಈಗಾಗಲೇ ಹಿಂಗಾರು ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗುತ್ತಿದೆ. ಆದರೂ, ಆಗೀಗ ಕೆಲವೆಡೆ ಹಿಂಗಾರು ಮಳೆಯ ನರ್ತನವಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನ.9ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ನ.9 ಮತ್ತು 10ರಂದು ರಾಜ್ಯದ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ತಿಳಿಸಿದೆ.