×
Ad

ಕೊರೋನ ಪೀಡಿತ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವ ವಿಚಾರ: ಸರಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

Update: 2020-11-09 22:27 IST

ಬೆಂಗಳೂರು, ನ.9: ಕೊರೋನ ಸೋಂಕು ದೃಢಪಟ್ಟಾಗ, ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದು ಕ್ವಾರಂಟೈನ್‍ಗೆ ಒಳಗಾದ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವ ವಿಚಾರವಾಗಿ ಸೂಕ್ತ ಆದೇಶ ಹೊರಡಿಸುವಂತೆ ನೀಡಿದ್ದ ನಿರ್ದೇಶನ ಪಾಲಿಸುವಲ್ಲಿ ವಿಫಲವಾಗಿರುವ ಸರಕಾರದ ಕ್ರಮಕ್ಕೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ಕೊರೋನ ಸಂದರ್ಭದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಸುರಕ್ಷತೆಗೆ ಮಾರ್ಗಸೂಚಿಗಳನ್ನು ರೂಪಿಸುವಂತೆ ಹಾಗೂ ಕ್ವಾರಂಟೈನ್ ಅವಧಿಯಲ್ಲಿ ವೇತನ ಪಾವತಿಸುವಂತೆ ಕೋರಿ ಕಾರ್ಮಿಕ ಸಂಘಟನೆ ಎಐಟಿಯುಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಸರಕಾರ ಸಲ್ಲಿಸಿರುವ ಮಾಹಿತಿ ಸಮಂಜಸವಾಗಿಲ್ಲ. ಕ್ವಾರಂಟೈನ್‍ಗೆ ಅಥವಾ ಚಿಕಿತ್ಸೆಗೆ ಒಳಗಾಗುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವ ಬದಲು ಬಾಕಿ ರಜೆಗಳನ್ನು ಹೊಂದಾಣಿಕೆ ಮಾಡಿಕೊಳ್ಳಬೇಕು. ಒಂದು ವೇಳೆ ರಜೆ ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಿಗುವ ರಜೆಗಳನ್ನು ಆಡಳಿತ ಮಂಡಳಿಯ ಅನುಮತಿ ಮೇರೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದಿದೆ. ಇದು ಸರಿಯಾದ ಕ್ರಮವಲ್ಲ ಹಾಗೂ ನ್ಯಾಯಾಲಯದ ನಿರ್ದೇಶನ ಪಾಲನೆಯಾಗಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರಕಾರದ ಕ್ರಮ ನಿರೀಕ್ಷಿಸಿದಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿತು. ಅಲ್ಲದೇ ಮುಂದಿನ ವಿಚಾರಣೆ ವೇಳೆ ಈ ಸಂಬಂಧ ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿ ವಿಚಾರಣೆಯನ್ನು ನ.19ಕ್ಕೆ ಮುಂದೂಡಿತು. ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ಕ್ವಾರಂಟೈನ ಅವಧಿಯಲ್ಲಿ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವ ಸಂಬಂಧ ಸೂಕ್ತ ಆದೇಶ ಹೊರಡಿಸುವಂತೆ ಸರಕಾರಕ್ಕೆ ಸೂಚಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News