'ದೀಪಾವಳಿ' ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 1,000 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

Update: 2020-11-10 11:57 GMT

ಬೆಂಗಳೂರು, ನ.10: ಕೆಎಸ್ಆರ್‌ಟಿಸಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ನ.13, 14ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರ್‍ರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಹಾಗೂ ನ.16ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‍ಗಳು ಕಾರ್ಯಾಚರಣೆ ನಡೆಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‍ಗಳು ಕಾರ್ಯಾಚರಣೆ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ. ಹಾಗೂ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕ್ಕಿಂಗ್‍ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ್‍ರಾಜ್ಯದಲ್ಲಿ ಇರುವ 706 ಗಣಕೀಕೃತ ಬುಕಿಂಗ್ ಕೌಂಟರ್ ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್‌ಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ, ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News