ವಿಧಾನ ಪರಿಷತ್‍ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು

Update: 2020-11-10 16:32 GMT

ಬೆಂಗಳೂರು, ನ.10: ವಿಧಾನಪರಿಷತ್‍ನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮೂರು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಿದೆ. ಹಾಗೂ ಒಂದು ಸ್ಥಾನದ ಫಲಿತಾಂಶವು ನ.11 ರಂದು ಪ್ರಕಟಗೊಳ್ಳಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ, ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಜಯಭೇರಿ ಭಾರಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಇದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ತಮ್ಮ ಸಮೀಪದ ಪ್ರತಿಸ್ಪರ್ಧಿ ಎ.ಪಿ.ರಂಗನಾಥ್ ವಿರುದ್ದ ಸುಮಾರು 2,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಅವರು ನಾಲ್ಕನೇ ಬಾರಿ ವಿಧಾನಪರಿಷತ್ ಪ್ರವೇಶಿಸುತ್ತಿದ್ದಾರೆ. ಈ ಮೊದಲು ಅವರು ಜೆಡಿಎಸ್‍ನಿಂದ ಪರಿಷತ್‍ಗೆ ಆಯ್ಕೆಯಾಗಿದ್ದರು.

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿ ಗೆಲುವು ಸಾಧಿಸಿದ್ದಾರೆ. ಇವರು ಆರಂಭದಿಂದಲೂ ಮುನ್ನಡೆ ಸಾಧಿಸಿದ್ದರು. ಆದರೆ, ಚುನಾವಣಾ ಆಯೋಗ ನಿಗದಿ ಪಡಿಸಿದ್ದ ಕೋಟಾ ತಲುಪಲು ಸಾಧ್ಯವಾಗಲಿಲ್ಲ. ಈ ವೇಳೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್(59 ಮತ), ಪಕ್ಷೇತರ ಅಭ್ಯರ್ಥಿ ಚಂದ್ರಕಾಂತ್ ಸಿಂಗ್(93 ಮತ) ಜೆಡಿಎಸ್‍ನ ತಿಮ್ಮಯ್ಯ ಪುರ್ಲೆ ಅವರನ್ನು ಸ್ಪರ್ಧೆಯಿಂದ ಕೈಬಿಟ್ಟು, ಅವರಿಗೆ ಸಲ್ಲಿಕೆಯಾಗಿದ್ದ ಮತಗಳಲ್ಲಿನ ದ್ವಿತೀಯ ಪ್ರಾಶಸ್ತ್ಯದ ಮತಗಳ ಎಣಿಕೆ ನಡೆಸಲಾಯಿತು. ಈ ಸುತ್ತಿನಲ್ಲಿ ನಿಗದಿತ ಕೋಟಾವನ್ನು ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ತಲುಪಿದ ನಂತರ ಫಲಿತಾಂಶ ಘೋಷಿಸಲಾಯಿತು.

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯಥಿ ಎಸ್.ವಿ.ಸಂಕನೂರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ವಿರುದ್ಧ ಜಯ ಗಳಿಸಿದ್ದಾರೆ. ಇನ್ನು ಆಗ್ನೇಯ ಪದವೀಧರ ಕ್ಷೇತ್ರದ ಮತ ಎಣಿಕೆಯು ತಡವಾಗಿ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಇದರ ಫಲಿತಾಂಶವು ನಾಳೆ(ನ.11) ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News