ಮುನಿರತ್ನ ವಿರುದ್ಧದ ನಕಲಿ ಗುರುತಿನ ಚೀಟಿ ಪ್ರಕರಣ: ಐಪಿಎಸ್ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್ ನಿರ್ದೇಶನ

Update: 2020-11-11 11:33 GMT

ಬೆಂಗಳೂರು, ನ.11: ಆರ್ ಆರ್ ನಗರ ವಿಧಾನ ಸಭಾ ಕ್ಷೇತ್ರಕ್ಕೆ 2018ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪತ್ತೆಯಾಗಿದ್ದ ನಕಲಿ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿ ಒಬ್ಬರನ್ನು ನೇಮಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಎನ್.ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ಅರ್ಜಿದಾರರ ಪರ ವಾದಿಸಿದ ಮಾಜಿ ಅಡ್ವಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ಆರ್. ಆರ್. ನಗರದಲ್ಲಿ ಪತ್ತೆಯಾಗಿದ್ದ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣವನ್ನು ಸ್ಥಳೀಯ ಪೊಲೀಸರು ಸರಿಯಾಗಿ ತನಿಖೆ ಮಾಡಿಲ್ಲ. ಪ್ರತ್ಯಕ್ಷ್ಯ ಸಾಕ್ಷಿಗಳ ಹೇಳಿಕೆಯನ್ನೂ ದಾಖಲಿಸಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿಲ್ಲ. ದಕ್ಷವಾಗಿ ಹಾಗೂ ಪ್ರಾಮಾಣಿಕವಾಗಿ ತನಿಖೆ ನಡೆಸಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿದೆ ಎಂದು ವಿವರಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೇ, ಇಲ್ಲವೇ ಎಂಬುದನ್ನು ನಾವೇ ನಿರ್ಧರಿಸುವುದು ಕಷ್ಟ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಿರಿಯ ಐಪಿಎಸ್ ಅಧಿಕಾರಿ ಒಬ್ಬರನ್ನು ನೇಮಿಸಬೇಕು. ಅವರು ತನಿಖೆ ಸರಿಯಾಗಿ ನಡೆದಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಹಾಗೆಯೇ, ತನಿಖೆ ನಡೆಸಬೇಕಿರುವ ಅಂಶಗಳನ್ನು ಗುರುತಿಸಬೇಕು. ಈ ವರದಿಯನ್ನು ಡಿ.15ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಡಿ.18ಕ್ಕೆ ಮುಂದೂಡಿತು.

ಪ್ರಕರಣವೇನು: 2018ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಆರ್ ಆರ್ ನಗರ ವಿಧಾನ ಸಭಾ ಕ್ಷೇತ್ರದಿಂದ ಮುನಿರತ್ನ ಸ್ಪರ್ಧಿಸಿದ್ದರು. ಚುನಾವಣೆಗೂ ಮುನ್ನ ಕ್ಷೇತ್ರದ ವ್ಯಾಪ್ತಿಯ ಜಾಲಹಳ್ಳಿಯ ಬೆಂಬಲಿಗರ ಆಪಾರ್ಟ್ಮೆಂಟ್‌ನಲ್ಲಿ 9 ಸಾವಿರಕ್ಕೂ ಅಧಿಕ ವೋಟರ್ ಐಡಿಗಳು ಹಾಗೂ ಮುನಿರತ್ನ ಸ್ಪರ್ಧಿಸಿದ್ದ ಪಕ್ಷದ ಕರಪತ್ರಗಳು ಪತ್ತೆಯಾಗಿದ್ದವು. ಈ ಸಂಬಂಧ ಚುನಾವಣಾ ಆಯೋಗ ಹಾಗೂ ಸ್ಥಳೀಯ ನಿವಾಸಿ ರಾಕೇಶ್ ಪ್ರತ್ಯೇಕವಾಗಿ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಜಾಲಹಳ್ಳಿ ಠಾಣೆ ಪೊಲೀಸರು ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು ಸಿಬಿಐ ತನಿಖೆ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News