ಸಿಎಂ ಪುತ್ರ ವಿಜಯೇಂದ್ರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಎಸ್.ಟಿ.ಸೋಮಶೇಖರ್

Update: 2020-11-13 14:01 GMT

ಧಾರವಾಡ, ನ.13: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಆದುದರಿಂದ, ಈ ಬಗ್ಗೆ ಚರ್ಚೆ ನಡೆಸುವುದು ಅನಗತ್ಯ ಎಂದರು.

ಬಸವ ಕಲ್ಯಾಣ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡಬೇಕೆಂಬ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದ ಅವರು, ಇದೇ ವೇಳೆ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಇತ್ತೀಚೆಗೆ ಶಾಸಕರು ನಡೆಸಿದ ಸಭೆಯ ಕುರಿತು ಪ್ರತಿಕ್ರಿಯಿಸಿ, ಸಭೆ ನಡೆಸಿದವರು ಬಿಜೆಪಿ ಶಾಸಕರೇ ಹೊರತು, ಬೇರೆ ಪಕ್ಷದವರಲ್ಲ. ಸಭೆ ನಡೆಸಿರುವುದರಲ್ಲಿ ಯಾವುದೆ ವಿಶೇಷತೆ ಇಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ. ಯಾರನ್ನು ಸಂಪುಟಕ್ಕೆ ಸೇರ್ಪಡೆ ಮಾಡಬೇಕು, ಯಾರನ್ನು ಕೈ ಬಿಡಬೇಕು ಎಂಬುದನ್ನು ಅವರು ನಿರ್ಧರಿಸುತ್ತಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅಧಿಕಾರ ನಮಗಿಲ್ಲ ಎಂದು ಸೋಮಶೇಖರ್ ಹೇಳಿದರು.

ಇದೇ ವೇಳೆ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿನಯ್ ಕುಲಕರ್ಣಿ ಬಂಧನದಲ್ಲಿ ಯಾವುದೆ ರಾಜಕೀಯ ಹಸ್ತಕ್ಷೇಪವಾಗಿಲ್ಲ. ಸಿಬಿಐ ಕಾನೂನು ರೀತಿ ತನ್ನ ಕೆಲಸ ಮಾಡುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News