ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದಿಂದ ಧರಣಿ

Update: 2020-11-13 17:11 GMT

ಬೆಂಗಳೂರು, ನ.13: ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸಬೇಕು, ಕಬ್ಬಿನಿಂದ ಬರುವ ಸಕ್ಕರೆ ಇಳುವರಿಯನ್ನು ಕಡಿಮೆ ತೋರುತ್ತಿರುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಕಬ್ಬಿನ ತೂಕದಲ್ಲಿ ಮೋಸ ತಪ್ಪಿಸಲು ಕಠಿಣ ಆದೇಶ ಹೊರಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಬ್ಬು ಅಭಿವೃದ್ಧಿ ಕಚೇರಿಯ ಎದುರು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ನಡುವೆ ದ್ವಿಪಕ್ಷೀಯ ಒಪ್ಪಂದ ಪತ್ರ ಕಡ್ಡಾಯವಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಲಾಯಿತು. ಬಳಿಕ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಬ್ಬು ಅಭಿವೃದ್ಧಿ ಆಯುಕ್ತ ಅಕ್ರಂಪಾಷ, ಹಾಗೂ ವಾಣಿಜ್ಯ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಕುಮಾರ್ ನಾಯಕ್‍ರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ಮಾತುಕತೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುರಬೂರು ಶಾಂತಕುಮಾರ್, ನ.20ರೊಳಗಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಸಮಯ ಪಡೆಯಲು ಅಧಿಕಾರಿಗಳು ಸಮಯಾವಕಾಶ ಕೋರಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಪಾಟೀಲ್, ರಮೇಶ್ ಹೂಗಾರ್, ತೇಜಸ್ವಿ ಪಟೇಲ್, ಹತ್ತಳ್ಳಿ ದೇವರಾಜ್, ಗುರುಸಿದ್ದಪ್ಪ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News