ಕೇಂದ್ರದಿಂದ ಇನ್ನೂ ಹೆಚ್ಚಿನ ನೆರೆ ಪರಿಹಾರಕ್ಕೆ ಸಕಲ ಪ್ರಯತ್ನ: ಸಿಎಂ ಯಡಿಯೂರಪ್ಪ
ಬೆಂಗಳೂರು, ನ. 14: ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ನಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಸಂತ್ರಸ್ತರಿಗೆ ಕೇಂದ್ರ ಸರಕಾರ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ(ಎನ್‍ಡಿಆರ್‍ಎಫ್) ನೀಡಿರುವ 577.84 ಕೋಟಿ ರೂ.ಮೊದಲ ಕಂತು ಬಿಡುಗಡೆ ಮಾಡಿದ್ದು, ಇನ್ನೂ ಹೆಚ್ಚಿನ ಮೊತ್ತದ ಪರಿಹಾರಕ್ಕೆ ಸಕಲ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ನೆಹರೂ ಅವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಮೊದಲನೇ ಕಂತನ್ನು ಬಿಡುಗಡೆ ಮಾಡಿದ್ದು, ಇನ್ನೂ ಹೆಚ್ಚಿನ ಮೊತ್ತದ ನೆರವನ್ನು ಕರ್ನಾಟಕ ರಾಜ್ಯಕ್ಕೆ ನೀಡುವ ನಿರೀಕ್ಷೆ ಇದೆ ಎಂದು ಸ್ಪಷ್ಟನೆ ನೀಡಿದರು.
ಎಚ್‍ಡಿಕೆ ಭೇಟಿಗೆ ಸ್ಪಷ್ಟನೆ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್(ಡಿಸಿಸಿ) ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ನನ್ನನ್ನು ಭೇಟಿ ಮಾಡಿದ್ದರು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ವಿವರಣೆ ನೀಡಿದರು.
ಯಪಿಎಸ್‍ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗಳು ಒಟ್ಟೊಟ್ಟಿಗೆ ಬಂದಿವೆ. ಹೀಗಾಗಿ, ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ವಿಧ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಹೀಗಾಗಿ ಈ ಸಂಬಂಧ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು ಎಂದು ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.