ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ: ಸಚಿವ ಸಂಪುಟ ಉಪ ಸಮಿತಿ ರಚನೆಗೆ ತೀರ್ಮಾನ
ಬೆಂಗಳೂರು, ನ. 18: ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಮೀಸಲಾತಿ ಹೆಚ್ಚಿಸುವ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳಲು ‘ಸಚಿವ ಸಂಪುಟ ಉಪ ಸಮಿತಿ ರಚನೆ' ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ನಿರ್ಧರಿಸಿದೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಹೆಚ್ಚಿಸುವ ನಿಟ್ಟಿನಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದರು.
ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆದಿತ್ತು. ಪರಿಶಿಷ್ಟ ಜಾತಿಗೆ ಶೇ.15ರಷ್ಟು ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಆಗ್ರಹ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ, ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತ್ತು.
ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿಯನ್ವಯ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು. ಈ ಮಧ್ಯೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಗೂ ಮೊದಲು ಸಮುದಾಯದ ಸಂಘಟನೆಗಳು ಹಾಗೂ ಮಠಾಧೀಶರ ನೇತೃತ್ವದಲ್ಲಿ ಹೋರಾಟವೂ ನಡೆದಿತ್ತು ಎಂದು ಅವರು ಸ್ಮರಿಸಿದರು.