×
Ad

ಪೌರ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2020-11-19 20:39 IST

ಮಂಗಳೂರು, ನ.19: ಪೌರ ಕಾರ್ಮಿಕರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅಗತ್ಯ ಮೂಲಭೂತ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚಿಸಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿ/ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪ್ರಗತಿ ಪರಿಶೀಲನೆ, ಜಾಗೃತಿ ಮತ್ತು ಉಸ್ತುವಾರಿ ಹಾಗೂ ಜಾತಿ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಪೌರಕಾರ್ಮಿಕರಿಗೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ಸ್ಥಳ ನಿಗದಿಪಡಿಸಿ ಇದಕ್ಕೆ ಪ್ರತ್ಯೇಕ ಕ್ರೀಯಾ ಯೋಜನೆಯನ್ನು ಸಿದ್ಧಪಡಿಸಬೇಕು. ಎಲ್ಲಾ ನಗರ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ವಸ್ತ್ರ ಬದಲಾವಣೆ ಕೊಠಡಿ (ಗೃಹ) ಹಾಗೂ ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ತಹಶೀಲ್ದಾರರು ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರನ್ನು ಪಟ್ಟಿ ಮಾಡಿ, ಜೊತೆಗೆ ಆಯಾ ತಾಲೂಕಿನಲ್ಲಿ ರುವ ಜಮೀನನ್ನು ಗುರುತಿಸಿ ಅದರ ಸಂಪೂರ್ಣ ಮಾಹಿತಿ ನೀಡಬೇಕು. ನಿವೇಶನ ರಹಿತರನ್ನು ಗುರುತಿಸಿ ಶೀಘ್ರದಲ್ಲಿ ನಿವೇಶನ ಹಂಚಿಕೆ ಮಾಡಬೇಕು ಎಂದು ಸೂಚಿಸಿದರು.

ಸ್ಥಳೀಯ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಯಾವುದೇ ರೀತಿಯ ದೌರ್ಜನ್ಯವಾದರೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಸಭೆಯಲ್ಲಿ ಮಂಗಳೂರು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಉಪವಿಭಾಗಾಧಿಕಾರಿ ಮದನ್ ಮೋಹನ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಯೋಗಿಶ್ ಎಸ್. ಬಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News