ಪ್ರಶಾಂತ್ ಸಂಬರಗಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

Update: 2020-11-19 16:28 GMT

ಬೆಂಗಳೂರು, ನ.19: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಶಾಸಕ ಝಮೀರ್ ಅಹ್ಮದ್ ಖಾನ್ ಅವರಿಗೂ ನಂಟಿದೆ ಎಂದು ಆರೋಪಿಸಿದ್ದ ಪ್ರಶಾಂತ್ ಸಂಬರಗಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ನಗರದ 24ನೆ ಎಸಿಎಂಎಂ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ವಿಚಾರಣೆಗೆ ಹಾಜರಾಗುವಂತೆಯೂ ಆರೋಪಿ ಸಂಬರಗಿಗೆ ನಿರ್ದೇಶಿಸಿದೆ.

ಪ್ರಶಾಂತ್ ಸಂಬರಗಿ ತಮ್ಮ ವಿರುದ್ಧ ಅನಗತ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಚಾಮರಾಜಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರೂ ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿ ಶಾಸಕ ಝಮೀರ್ ಅಹ್ಮದ್ ಖಾನ್ ನಗರದ 24ನೆ ಎಸಿಎಂಎಂ ಕೋರ್ಟ್‍ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಗುರುವಾರ ಆರೋಪಿ ಪ್ರಶಾಂತ್ ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್ 499 ಹಾಗೂ 500ರ ಅಡಿ ಮಾನನಷ್ಟ ಮೊಕ್ಕದ್ದಮೆ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಅಲ್ಲದೇ, ಆರೋಪಿ ಪ್ರಶಾಂತ್ ಸಂಬರಗಿ 2021ರ ಜ.21 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಜಮೀರ್ ಪರ ವಕೀಲ ಇಸ್ಮಾಯಿಲ್ ಜಬಿವುಲ್ಲಾ ವಾದಿಸಿದ್ದರು.

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ಬಗ್ಗೆ ಬಹಿರಂಗವಾಗಿ ಹಲವು ಹೇಳಿಕೆಗಳನ್ನು ನೀಡಿದ್ದ ಪ್ರಶಾಂತ್ ಸಂಬರಗಿ ಅವರು ಪತ್ರಿಕಾಗೋಷ್ಠಿ ನಡೆಸಿ ಶಾಸಕ ಝಮೀರ್ ಅಹ್ಮದ್ ಖಾನ್ ವಿರುದ್ಧವೂ ಹೇಳಿಕೆ ನೀಡಿದ್ದರು. ಈ ಸಂಬಂಧ ಝಮೀರ್ ಅಹ್ಮದ್ ಖಾನ್ ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‍ಐಆರ್ ದಾಖಲಿಸದ ಹಿನ್ನೆಲೆಯಲ್ಲಿ ಎಸಿಎಂಎಂ ಕೋರ್ಟ್ ನಲ್ಲಿ ಪಿಸಿಆರ್ ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News