ರಾಜ್ಯದಲ್ಲಿ 16 ಸಾವಿರ ಪೊಲೀಸರ ನೇಮಕಾತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Update: 2020-11-20 12:02 GMT

ಬೆಂಗಳೂರು, ನ.20: ರಾಜ್ಯ ಪೊಲೀಸ್ ಇಲಾಖೆ ಅಡಿಯಲ್ಲಿ ಸುಮಾರು 16 ಸಾವಿರ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಜರುಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದ್ದು, ಮತ್ತೆ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ. ಅಲ್ಲದೆ, ಪೊಲೀಸ್ ಇಲಾಖೆಯನ್ನು ಇನ್ನಷ್ಟು ಸದೃಢವಾಗಿಸಲು ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಇದಕ್ಕೂ ಮೊದಲು ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಯ ಪ್ರಗತಿ ಮತ್ತು ಹೊಸ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧವಾಗಿದ್ದು, ನಾವು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಜನರಿಗೆ ಹತ್ತಿರವಾಗಬೇಕು ಎಂದು ಬೊಮ್ಮಾಯಿ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News