ಪೊಲೀಸ್ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ. ರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ
ಬೆಂಗಳೂರು: ಬೆಂಗಳೂರು ನಗರದ ವಿವೇಕ ನಗರ ಪೊಲೀಸ್ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ. ಅವರಿಗೆ ಶುಕ್ರವಾರ ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ನಗದು ಪುರಸ್ಕಾರ ನೀಡಿ ಗೌರವಿಸಿದರು.
ರಫೀಕ್ ಅವರು 15 ವರ್ಷಗಳ ಪೊಲೀಸ್ ಸೇವೆಯಲ್ಲಿ ದಕ್ಷತೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಜನಾನುರಾಗಿ ಅಧಿಕಾರಿಯಾಗಿ ಪ್ರಸಿದ್ಧಿ ಪಡೆದಿದ್ದರು. ರಾಜ್ಯ ಮಟ್ಟದಲ್ಲಿ ಸದ್ದು ಮಾಡಿದ್ದ ಹಲವಾರು ಪ್ರಕರಣಗಳನ್ನು ಬೇಧಿಸಿದ್ದರು. ಇನ್ಸ್ ಪೆಕ್ಟರ್ ರಫೀಕ್ ಅವರು ಮೂಲತಃ ವಿಟ್ಲ ಸಮೀಪದ ಕೆಲಿಂಜ ನಿವಾಸಿಯಾಗಿದ್ದಾರೆ.
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ರಾಜ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು. ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ತರಬೇತಿ ವಿಭಾಗದ ಡಿಜಿಪಿ ಪದಮ್ ಕುಮಾರ್ ಕರ್ಗ್ ಅವರು ಈ ಸಂದರ್ಭ ವೇದಿಕೆಯಲ್ಲಿ ಉಪಸ್ಥಿತರಿದ್ದರು.
2017ನೇ ಸಾಲಿನ 117 ಹಾಗೂ 2018ನೇ ಸಾಲಿನ 120 ವಿವಿಧ ಹುದ್ದೆಯಲ್ಲಿರುವ ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಲಾಯಿತು.