ನೂತನ ಶಾಸಕರಾಗಿ ಮುನಿರತ್ನ, ಡಾ.ರಾಜೇಶ್ ಗೌಡ ಪ್ರಮಾಣ ವಚನ ಸ್ವೀಕಾರ

Update: 2020-11-23 14:14 GMT

ಬೆಂಗಳೂರು, ನ. 23: ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಮುನಿರತ್ನ ಹಾಗೂ ಶಿರಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಸಿ.ಎಂ. ರಾಜೇಶ್‍ ಗೌಡ ವಿಧಾನಸಭೆಯ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಸೋಮವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೂತನ ಸದಸ್ಯರಾದ ಮುನಿರತ್ನ ಮತ್ತು ರಾಜೇಶ್‍ಗೌಡ ಅವರಿಗೆ ಪ್ರಮಾಣ ವಚನ ಬೋಧನೆ ಮಾಡಿದರು.

ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದ ಮುನಿರತ್ನ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಡಾ.ರಾಜೇಶ್ ಗೌಡ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಇಬ್ಬರಿಗೂ ಪುಷ್ಪಗುಚ್ಛವನ್ನು ನೀಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವರು ಹಾಗೂ ಇನ್ನಿತರ ಗಣ್ಯರು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ನೂತನ ಶಾಸಕರಿಬ್ಬರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News