16ನೆ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಪ್ರತಿಭಟನೆ

Update: 2020-11-23 12:12 GMT

ಬೆಂಗಳೂರು, ನ. 23: ರಾಮನಗರ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವಿನ ಬಿಕ್ಕಟ್ಟು ಮುಂದುವರಿದಿದ್ದು, ಕಾರ್ಮಿಕರ ಪ್ರತಿಭಟನೆ 15 ದಿನಗಳನ್ನು ಪೂರೈಸಿದ್ದು, 16ನೆ ದಿನಕ್ಕೆ ಕಾಲಿಟ್ಟಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಲಾಕ್‍ಔಟ್(ಬೀಗಮುದ್ರೆ) ಹಾಗೂ ಕಾರ್ಮಿಕರ ಪ್ರತಿಭಟನೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದರೂ ಆಡಳಿತ ಮಂಡಳಿ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅಲ್ಲದೆ, ‘ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗದ ಕಾರಣ ಕಾರ್ಖಾನೆ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ’ ಎಂದು ನೋಟಿಸ್ ಹಾಕಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಸೋಮವಾರ ಮಧ್ಯಾಹ್ನ ಕಾರ್ಖಾನೆ ಮುಂಭಾಗದಲ್ಲಿ ಮಾತನಾಡಿದ ಟೊಯೋಟಾ ಕಿರ್ಲೋಸ್ಕರ್ ಕಾರ್ಖಾನೆ ಎಂಪ್ಲಾಯಿಸ್ಸ್ ಯೂನಿಯನ್ (ಕೆಎಂಟಿಇಯು) ಅಧ್ಯಕ್ಷ ಪ್ರಸನ್ನಕುಮಾರ್ ಚೆಕ್ಕೆರೆ, ಕಾರ್ಖಾನೆ ಆಡಳಿತ ಮಂಡಳಿ ರಾಜ್ಯ ಸರಕಾರದ ಆದೇಶವನ್ನು ಉಲ್ಲಂಘಿಸಿದೆ. ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗಿದ್ದರೂ ಅವರನ್ನು ಕಾರ್ಖಾನೆ ಒಳಗೆ ಬಿಟ್ಟುಕೊಳ್ಳುತ್ತಿಲ್ಲ ಎಂದು ದೂರಿದರು.

ನಾವೆಲ್ಲರೂ ಕರ್ತವ್ಯಕ್ಕೆ ಹಾಜರಾಗಲು ಕಾರ್ಖಾನೆ ಗೇಟ್ ಬಳಿ ಆಗಮಿಸಿದ್ದೇವೆ. ಆದರೆ, ಕಾರ್ಖಾನೆ ಆಡಳಿತ ಮಂಡಳಿ, ‘ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗದ ಕಾರಣ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ’ ಎಂದು ನೋಟಿಸ್ ಹಾಕಿದೆ. ಇದು ಕಾನೂನು ಉಲ್ಲಂಘನೆಯೂ ಆಗಿದೆ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ, ಕಾರ್ಮಿಕರ ಸಚಿವ ಶಿವರಾಮ ಹೆಬ್ಬಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಟೊಯೋಟಾ ಕಿರ್ಲೋಸ್ಕರ್ ಕಾರ್ಖಾನೆ ಬಿಕ್ಕಟ್ಟು ಪರಿಹಸುವ ಮೂಲಕ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಬೇಕು ಎಂದು ಪ್ರಸನ್ನಕುಮಾರ್ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News